
ಮಂಗಳೂರು, 10 ಜನವರಿ (ಹಿ.ಸ.) :
ಆ್ಯಂಕರ್ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗುಡ್ಡಗಾಡು ಮತ್ತು ದೂರದ ಹಳ್ಳಿಗಳಲ್ಲಿ ವಾಸಿಸುವ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ‘ಆರೋಗ್ಯ ಸೇತು’ ಯೋಜನೆಯಡಿ ಸ್ಥಾಪಿಸಲಾದ ಸಂಚಾರಿ ಆರೋಗ್ಯ ಘಟಕಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳೂರಿನ ಪ್ರಜಾ ಸೌಧದ ಆವರಣದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಗುಡ್ಡಗಾಡು ಹಾಗೂ ದೂರದ ಪ್ರದೇಶಗಳಲ್ಲಿ ವಾಸಿಸುವ ಜನರ ಆರೋಗ್ಯ ರಕ್ಷಣೆ ಸರ್ಕಾರದ ಪ್ರಮುಖ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು. ಈ ಹಿನ್ನೆಲೆ ವೈದ್ಯರು ಹಾಗೂ ಶುಶ್ರೂಷಕರನ್ನೊಳಗೊಂಡ ತಜ್ಞ ತಂಡಗಳು ಸಂಚಾರಿ ಆರೋಗ್ಯ ಘಟಕಗಳ ಮೂಲಕ ಹಳ್ಳಿಹಳ್ಳಿಗಳಿಗೆ ತೆರಳಿ ಪ್ರಾಥಮಿಕ ಹಾಗೂ ಅವಶ್ಯಕ ಆರೋಗ್ಯ ಸೇವೆಗಳನ್ನು ನೀಡಲಿವೆ ಎಂದು ತಿಳಿಸಿದರು.
‘ಆರೋಗ್ಯ ಸೇತು’ ಯೋಜನೆಯ ಮೂಲಕ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಜನರಿಗೆ ಆರೋಗ್ಯ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ಈ ಸಂಚಾರಿ ಘಟಕಗಳು ಅದರಲ್ಲಿ ಮಹತ್ವದ ಪಾತ್ರ ವಹಿಸಲಿವೆ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa