
ಗದಗ, 11 ಜನವರಿ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ರಾಮಗೇರಿ ಗ್ರಾಮದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಯಿತು.
ಹೂಲಗೂರು ಗ್ರಾಮಕ್ಕೆ ಹೊರಟಿದ್ದ ಬೈಕ್ ಸವಾರರು ರಾಮಗೇರಿ ಗ್ರಾಮದ ಬಳಿ ಸಾಗುತ್ತಿದ್ದ ವೇಳೆ, ಹುಬ್ಬಳ್ಳಿಯಿಂದ ಸಂಶಿಗೆ ಹೊರಟಿದ್ದ ಕಾರು ವಿರುದ್ಧ ದಿಕ್ಕಿನಿಂದ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಕಾರಿನ ಮುಂದಿನ ಭಾಗಕ್ಕೂ ಭಾರಿ ಹಾನಿಯಾಗಿದೆ.
ಅಪಘಾತದಲ್ಲಿ ಬೈಕ್‌ನಲ್ಲಿದ್ದ ಫಾತೀಮಾ ಎಂಬ ಮಹಿಳೆಗೆ ಕೈ ಹಾಗೂ ಕಾಲು ಮುರಿದು ಗಂಭೀರ ಗಾಯಗಳಾಗಿವೆ. ಇನ್ನೊಬ್ಬ ಗಾಯಾಳು ಮಹಮ್ಮದ್ ಅಲಿ ಅವರಿಗೆ ಒಂದು ಕಾಲಿನ ಬೆರಳುಗಳು ಕಿತ್ತುಹೋಗಿರುವುದರಿಂದ ಪರಿಸ್ಥಿತಿ ಗಂಭೀರವಾಗಿದೆ. ಜೊತೆಗೆ ಬೈಕ್‌ನಲ್ಲಿದ್ದ ಆರು ವರ್ಷದ ಸಮರೀನ್ ಬಾಲಕಿಗೂ ಕಾಲಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಅಪಘಾತದ ನಂತರ ಗಾಯಾಳುಗಳು ಸ್ಥಳದಲ್ಲೇ ನರಳಾಡುತ್ತಿದ್ದು, ಈ ದೃಶ್ಯವನ್ನು ಕಂಡ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದರು. ಕೂಡಲೇ 108 ಆಂಬ್ಯುಲೆನ್ಸ್‌ಗೆ ಮಾಹಿತಿ ನೀಡಲಾಗಿದ್ದು, ಗಾಯಾಳುಗಳನ್ನು ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಆಸ್ಪತ್ರೆಯಲ್ಲಿ ಮೂವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಇನ್ನು ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯ ಸಂಭವಿಸಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣವಾದ ಅಂಶಗಳ ಕುರಿತು ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಜರುಗಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / lalita MP