
ಬೆಂಗಳೂರು, 13 ಜನವರಿ (ಹಿ.ಸ.) :
ಆ್ಯಂಕರ್ : ಬಡವರ ಜೀವನಾಧಾರವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ)ಯನ್ನು ಉಳಿಸುವುದು ಬಡವರ ಹಕ್ಕಿನ ಸಂಗ್ರಾಮವಾಗಿದ್ದು, ಇದಕ್ಕಾಗಿ ಕಾಂಗ್ರೆಸ್ ಪಕ್ಷ ‘ಮನರೇಗಾ ಬಚಾವೋ ಸಂಗ್ರಾಮ’ವನ್ನು ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಮನರೇಗಾ ಯೋಜನೆಯನ್ನು ರಕ್ಷಿಸುವುದರ ಜೊತೆಗೆ ಮುಂಬರುವ ಪಂಚಾಯತ್ ಚುನಾವಣೆಗಳಿಗಾಗಿ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಕೆಪಿಸಿಸಿ ವತಿಯಿಂದ ಬೆಂಗಳೂರಿನ ಗಾಯತ್ರಿ ವಿಹಾರದಲ್ಲಿ ಆಯೋಜಿಸಿದ್ದ ಮಹತ್ವದ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಹಾಗೂ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಗ್ರಾಮೀಣ ಬಡವರ ಬದುಕಿಗೆ ಮನರೇಗಾ ಅತ್ಯಂತ ಪ್ರಮುಖ ಯೋಜನೆಯಾಗಿದ್ದು, ಇದನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನಗಳನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ. ಗ್ರಾಮೀಣ ಅಭಿವೃದ್ಧಿ, ಉದ್ಯೋಗ ಭದ್ರತೆ ಮತ್ತು ಬಡವರ ಹಿತಕ್ಕಾಗಿ ಈ ಯೋಜನೆಯನ್ನು ಬಲಪಡಿಸುವುದು ಅಗತ್ಯವಿದೆ ಎಂದು ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.
ಪಂಚಾಯತ್ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಬಲಪಡಿಸುವುದು, ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa