
ಮೈಸೂರು, 13 ಜನವರಿ (ಹಿ.ಸ.) :
ಆ್ಯಂಕರ್ : ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ. ಸಂಜೆ ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು ಎಂದರು.
ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದರು.
ಪಕ್ಷದ ಶಾಸಕರೇ ಈ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಈ ಕುರಿತು ತಿಳಿದಿರುವುದಿಲ್ಲ. ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು ಎಂದರು.
ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದರು. ಶಾಸಕರಿಗಿಂತ ಹೆಚ್ಚಾಗಿ ಮಾಧ್ಯಮಗಳೇ ಈ ಕುರಿತು ಹೆಚ್ಚು ಮಾತನಾಡುತ್ತಿವೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa