ಛತ್ತೀಸ್‌ಗಢದಲ್ಲಿ ಭದ್ರತಾ ಪಡೆ–ನಕ್ಸಲರ ನಡುವೆ ಗುಂಡಿನ ಚಕಮಕಿ
ಬಿಜಾಪುರ, 17 ಜನವರಿ (ಹಿ.ಸ.) : ಆ್ಯಂಕರ್ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ವಾಯುವ್ಯ ಭಾಗದ ಅರಣ್ಯ ಹಾಗೂ ಪರ್ವತ ಪ್ರದೇಶಗಳಲ್ಲಿ ಶನಿವಾರ ಬೆಳಗ್ಗಿನಿಂದ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ತೀವ್ರ ಗುಂಡಿನ ಚಕಮಕಿ ನಡೆಯುತ್ತಿದೆ. ಈ ಎನ್‌ಕೌಂಟರ್ ಬಗ್ಗೆ ಬಸ್ತಾರ್ ವಲಯದ ಇನ್ಸ್‌ಪೆಕ್ಟರ್ ಜನರಲ್ ಆ
Encounter


ಬಿಜಾಪುರ, 17 ಜನವರಿ (ಹಿ.ಸ.) :

ಆ್ಯಂಕರ್ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ವಾಯುವ್ಯ ಭಾಗದ ಅರಣ್ಯ ಹಾಗೂ ಪರ್ವತ ಪ್ರದೇಶಗಳಲ್ಲಿ ಶನಿವಾರ ಬೆಳಗ್ಗಿನಿಂದ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ತೀವ್ರ ಗುಂಡಿನ ಚಕಮಕಿ ನಡೆಯುತ್ತಿದೆ.

ಈ ಎನ್‌ಕೌಂಟರ್ ಬಗ್ಗೆ ಬಸ್ತಾರ್ ವಲಯದ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿ) ಸುಂದರರಾಜ್ ಪಿ. ಮಾಹಿತಿ ನೀಡಿದ್ದು, ಕಾರ್ಯಾಚರಣೆ ಇನ್ನೂ ಮುಂದುವರಿದಿರುವುದರಿಂದ ಎನ್‌ಕೌಂಟರ್ ನಡೆದ ನಿಖರ ಸ್ಥಳ, ಭಾಗವಹಿಸಿರುವ ಭದ್ರತಾ ಪಡೆಗಳ ಸಂಖ್ಯೆ ಹಾಗೂ ಇತರೆ ಸೂಕ್ಷ್ಮ ವಿವರಗಳನ್ನು ಈ ಹಂತದಲ್ಲಿ ಬಹಿರಂಗಪಡಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮೂಲಗಳ ಪ್ರಕಾರ, ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (DRG) ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಆರಂಭಿಸಿದ್ದರು. ಬಸ್ತಾರ್ ಪ್ರದೇಶದಲ್ಲಿ ಸಕ್ರಿಯವಾಗಿರುವ ಪ್ರಮುಖ ನಕ್ಸಲ್ ಕಮಾಂಡರ್ ಪಾಪರಾವ್ ಸೇರಿದಂತೆ ಹೆಚ್ಚಿನ ಸಂಖ್ಯೆಯ ನಕ್ಸಲರು ಅಡಗಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಕಾರ್ಯಾಚರಣೆಯ ವೇಳೆ ಭದ್ರತಾ ಪಡೆಗಳು ನಕ್ಸಲರ ದೊಡ್ಡ ಗುಂಪನ್ನು ಎದುರಿಸಿದ್ದು, ಎರಡೂ ಕಡೆಯಿಂದ ತೀವ್ರ ಗುಂಡಿನ ಚಕಮಕಿ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ ಇದುವರೆಗೆ ಇಬ್ಬರು ನಕ್ಸಲರು ಸಾವನ್ನಪ್ಪಿರುವ ಸಾಧ್ಯತೆ ಇದ್ದು, ಸ್ಥಳದಿಂದ ಒಂದು ಎಕೆ–47 ರೈಫಲ್ ವಶಪಡಿಸಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಆದರೆ, ಈ ಮಾಹಿತಿಯನ್ನು ಇನ್ನೂ ಅಧಿಕೃತವಾಗಿ ದೃಢೀಕರಿಸಲಾಗಿಲ್ಲ.

ಪ್ರಸ್ತುತ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದು, ಹತ್ಯೆಗೀಡಾದ ನಕ್ಸಲರ ಶವಗಳನ್ನು ವಶಕ್ಕೆ ಪಡೆಯಲು ಹಾಗೂ ಪರಾರಿಯಾಗಿರುವ ಇತರ ನಕ್ಸಲರಿಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಗುಂಡಿನ ಚಕಮಕಿ ಇನ್ನೂ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande