
ಮುಂಬಯಿ, 18 ಜನವರಿ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮೊಹೋಲ್ ತಾಲ್ಲೂಕಿನ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ತಡ ರಾತ್ರಿ ಪುಣೆ–ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೊಹೋಲ್ ಸಮೀಪದ ದೇವ್ಡಿ ಪತಿ ಪ್ರದೇಶದಲ್ಲಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟರೆ, ಜ್ಯೋತಿ ಜೈದಾಸ್ ಟಕ್ಲೆ ಎಂಬ ಮಹಿಳೆ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಮೊಹೋಲ್ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪನ್ವೇಲ್‌ನ ಆರು ಜನರು ದೇವಸ್ಥಾನ ದರ್ಶನಕ್ಕಾಗಿ ಅಕ್ಕಲ್‌ಕೋಟ್‌ಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಳಗಿನ ಜಾವ ಅಪಘಾತ ನಡೆದಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ಘಟನೆಯ ಮಾಹಿತಿ ಪಡೆದ ಮೊಹೋಲ್ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿ ಸಿಲುಕಿದ್ದ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಪಂಚಶೀಲ ನಗರದ ಕೊಳೆಗೇರಿ ನಿವಾಸಿಗಳಾದ ಮಾಲಾ ರವಿ ಸಾಳ್ವೆ (40), ಅರ್ಚನಾ ತುಕಾರಾಂ ಭಂಡಾರೆ (47), ವಿಶಾಲ ನರೇಂದ್ರ ಭೋಸಲೆ (41), ಅಮರ ಪಾಟೀಲ ಹಾಗೂ ಆನಂದ ಮಾಳಿ ಎಂದು ಗುರುತಿಸಲಾಗಿದೆ.
ಘಟನೆಯ ಕುರಿತು ಮೊಹೋಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa