
ಬಾಗಲಕೋಟೆ, 19 ಜನವರಿ (ಹಿ.ಸ.) :
ಆ್ಯಂಕರ್ : 2025–26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮಾಡಿದ್ದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವಕ್ಕೆ ಚಾಲನೆ ನೀಡಿರುವುದು ಸಂತೋಷದ ಸಂಗತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಾದಾಮಿಯಲ್ಲಿ ಚಾಲುಕ್ಯ ಉತ್ಸವದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಿಂದ ಚಾಲುಕ್ಯ ಉತ್ಸವ ಆಯೋಜನೆಯಾಗಿರಲಿಲ್ಲ. ಬಜೆಟ್‌ನಲ್ಲಿ ನೀಡಿದ ಭರವಸೆಯಂತೆ ಇದೀಗ ಉತ್ಸವವನ್ನು ಆಯೋಜಿಸಲಾಗಿದ್ದು, ಇದರಲ್ಲಿ ಭಾಗವಹಿಸಿರುವುದು ಖುಷಿಯ ವಿಷಯ ಎಂದು ಹೇಳಿದರು.
ಬಾದಾಮಿಯ ಐತಿಹಾಸಿಕ ಹಾಗೂ ಸಾಂಸ್ಕೃತಿಕ ವೈಭವವನ್ನು ದೇಶ-ವಿದೇಶಗಳಿಗೆ ಪರಿಚಯಿಸುವ ಉದ್ದೇಶದಿಂದ ಈ ಉತ್ಸವವನ್ನು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ತಾವು ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಆ ಅಭಿವೃದ್ಧಿ ಕಾರ್ಯಗಳನ್ನು ಇಂದಿನ ಶಾಸಕರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ ಎಂದರು.
ಬಾದಾಮಿಯಿಂದ ಮೇಣದಬಸದಿ ಕಡೆಗೆ ಹೋಗುವ ರಸ್ತೆ ಅಭಿವೃದ್ಧಿ ಯೋಜನೆಗೆ ಪ್ರವಾಸೋದ್ಯಮ ಸಚಿವರು ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಸರ್ಕಾರದ ಅವಧಿಯಲ್ಲಿಯೇ ಬಾದಾಮಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa