
ಬೆಂಗಳೂರು, 02 ಜನವರಿ (ಹಿ.ಸ.) :
ಆ್ಯಂಕರ್ : ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರ ನಿವಾಸದ ಬಳಿ ನಡೆದ ಬ್ಯಾನರ್ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಗುಂಡೇಟಿಗೆ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಬಳಕೆಯಾದ ಬುಲೆಟ್ ಯಾವ ಗನ್‌ನಿಂದ ಹೊರಬಂದಿದೆ ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಯಾರ ಗನ್‌ನಿಂದ ಬುಲೆಟ್ ಬಂದಿದೆ ಎಂಬುದು ಸ್ಪಷ್ಟವಾಗಬೇಕು. ಅದು ಬಿಜೆಪಿ ಅವರ ಗನ್‌ನಿಂದ ಬಂದಿದೆಯೋ ಅಥವಾ ಕಾಂಗ್ರೆಸ್‌ನವರ ಗನ್‌ನಿಂದ ಬಂದಿದೆಯೋ ಎಂಬುದನ್ನು ಪತ್ತೆ ಹಚ್ಚಬೇಕಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಈ ಕುರಿತು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಾಥಮಿಕವಾಗಿ ಇದು ಖಾಸಗಿ ಬುಲೆಟ್ ಎನ್ನುವ ಮಾಹಿತಿ ನೀಡಿದ್ದಾರೆ. ಸತೀಶ್ ರೆಡ್ಡಿ ಅವರು ತಮ್ಮ ಭದ್ರತೆಯ ಸಲುವಾಗಿ ಗನ್ ಹೊಂದಿದ್ದು, ಗಾಳಿಯಲ್ಲಿ ಗುಂಡು ಹಾರಿಸಿದ ವೇಳೆ ಆ ಬುಲೆಟ್ ರಾಜಶೇಖರ್ ರೆಡ್ಡಿ ಅವರಿಗೆ ತಗುಲಿ ಸಾವಿಗೆ ಕಾರಣವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆಯ ಹಿನ್ನೆಲೆಯಲ್ಲಿ, ರಾಜಶೇಖರ್ ರೆಡ್ಡಿ ಅವರ ಸಾವಿಗೆ ಕಾರಣವಾದ ಬುಲೆಟ್ ಹಾಗೂ ಗನ್‌ನ ನಿಖರ ಮೂಲದ ಬಗ್ಗೆ ಸಂಪೂರ್ಣ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa