
ಬೆಂಗಳೂರು, 02 ಜನವರಿ (ಹಿ.ಸ.) :
ಆ್ಯಂಕರ್ : ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ನಿವಾಸದ ಎದುರು ನಿನ್ನೆ ನಡೆದಿರುವ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ, ಪೂರ್ವನಿಯೋಜಿತ ದುಷ್ಕೃತ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಆರೋಪಿಸಿದ್ದಾರೆ. ಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಶಾಸಕ ಜನಾರ್ಧನ ರೆಡ್ಡಿ ಹಾಗೂ ಅವರ ಕುಟುಂಬವನ್ನು ಗುರಿಯಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಉದ್ಘಾಟನಾ ಕಾರ್ಯಕ್ರಮದ ಬ್ಯಾನರ್ ಅಳವಡಿಕೆಯನ್ನು ನೆಪವಾಗಿಸಿಕೊಳ್ಳಲಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯೇ ಉಳಿದಿಲ್ಲ. ನಾಗರಿಕ ಸಮಾಜ ನೆಮ್ಮದಿಯಾಗಿ ಬದುಕುವ ವಾತಾವರಣವನ್ನು ಹಾಳುಮಾಡಿ, ಭಯಗ್ರಸ್ಥ ನಗರವನ್ನಾಗಿ ಮಾಡಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಅವರ ಬೆಂಬಲಿಗರು ಈ ದುಷ್ಕೃತ್ಯಕ್ಕೆ ಇಳಿದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಜನಾರ್ಧನ ರೆಡ್ಡಿಯವರು ಬಿಜೆಪಿಗೆ ಮರು ಸೇರ್ಪಡೆಯಾದ ಬಳಿಕ ಬಳ್ಳಾರಿ ಭಾಗದಲ್ಲಿ ಪಕ್ಷ ಸಂಘಟನೆ ಬಲಗೊಳ್ಳುತ್ತಿರುವುದು ಹಾಗೂ ಜನಾರ್ಧನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲು ಅವರ ನಡುವಿನ ರಾಜಕೀಯ ಬಾಂಧವ್ಯ ಪುನಃ ಗಟ್ಟಿಯಾಗಿರುವುದು ರಾಜಕೀಯ ದುಷ್ಟಶಕ್ತಿಗಳಿಗೆ ಸಹಿಸಲಾಗುತ್ತಿಲ್ಲ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ, ಸ್ಥಳೀಯ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಂತೆ ವರ್ತಿಸುತ್ತಿವೆ ಎಂಬ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಸ್ಥಳೀಯ ಪೊಲೀಸರು ಕಾಂಗ್ರೆಸ್ ಕೈಗೊಂಬೆಗಳಾಗಿದ್ದಾರೆ. ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರೆ ಈ ದುಷ್ಕೃತ್ಯವನ್ನು ತಡೆಯಲು ಸಾಧ್ಯವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರಿಗೆ ತಕ್ಷಣ ಸೂಕ್ತ ಭದ್ರತೆ ಒದಗಿಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa