
ಶಿವಮೊಗ್ಗ, 20 ಜನವರಿ (ಹಿ.ಸ.) :
ಆ್ಯಂಕರ್ : ಸಮಾಜ ಮತ್ತು ಸರ್ಕಾರದ ನಡುವೆ ಬಲವಾದ ಕೊಂಡಿಯಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸೊರಬ ತಾಲೂಕು ಘಟಕದ ವತಿಯಿಂದ ನಗರದ ಶ್ರೀರಂಗ ಕನ್ವೆನ್ಷನ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಜಡೆ ಮಹಾಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕಾರಂಗವು ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭವಾಗಿದ್ದು, ತಾಲ್ಲೂಕಿನ ಅಭಿವೃದ್ಧಿಯ ಪಯಣದಲ್ಲಿ ಪತ್ರಕರ್ತರ ರಚನಾತ್ಮಕ ಟೀಕೆ ಹಾಗೂ ಸಲಹೆಗಳನ್ನು ಸದಾ ಸ್ವಾಗತಿಸುತ್ತೇನೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸತ್ಯನಿಷ್ಠೆ, ವಸ್ತುನಿಷ್ಠತೆ ಹಾಗೂ ಸಮಾಜಮುಖಿ ಚಿಂತನೆಯೊಂದಿಗೆ ನೂತನ ಪದಾಧಿಕಾರಿಗಳ ತಂಡ ಕಾರ್ಯನಿರ್ವಹಿಸಲಿ ಎಂದು ಅವರು ಶುಭಕೋರಿದರು.
ಈ ಸಂದರ್ಭದಲ್ಲಿ ಸೊರಬ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಜಿ.ಎಂ. ತೋಟಪ್ಪ ಹಾಗೂ ಪದಾಧಿಕಾರಿಗಳ ತಂಡಕ್ಕೆ ಸಚಿವರು ಶುಭ ಹಾರೈಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa