
ಬೆಂಗಳೂರು, 20 ಜನವರಿ (ಹಿ.ಸ.) :
ಆ್ಯಂಕರ್ : ಸಿದ್ದಗಂಗಾ ಮಠದ ಶಿವೈಕ್ಯ ಶಿವಕುಮಾರ ಮಹಾಯೋಗಿಗಳ ಲಿಂಗೈಕ್ಯರಾಗಿ ನಾಳೆಗೆ ಏಳು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಶ್ರೀಸಿದ್ದಗಂಗಾ ಮಠದಲ್ಲಿ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭಾಗವಹಿಸಲಿದ್ದು, ಅವರ ಆಗಮನದ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಸಕಲ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.
ನಾಳೆ ಬೆಳಗ್ಗೆ 10:50ಕ್ಕೆ ಮಠಕ್ಕೆ ಆಗಮಿಸಲಿರುವ ಉಪರಾಷ್ಟ್ರಪತಿಗಳು, ಮೊದಲು ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಬೆಳಗ್ಗೆ 11 ಗಂಟೆಗೆ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಉಪರಾಷ್ಟ್ರಪತಿಗಳೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ಸಹ ಹಾಜರಿರಲಿದ್ದಾರೆ.
ಉಪರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಇನ್ನು ನಾಳೆ ಬೆಳಗ್ಗೆ 5 ಗಂಟೆಯಿಂದಲೇ ಮಠದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಆರಂಭವಾಗಲಿವೆ. ಶಿವಕುಮಾರ ಶ್ರೀಗಳ ಗದ್ದಿಗೆಗೆ ಮಂತ್ರಘೋಷಗಳೊಂದಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಬೆಳಗ್ಗೆ 8 ಗಂಟೆಗೆ ರುದ್ರಾಕ್ಷಿ ಮಂಟಪದಲ್ಲಿ ಶಿವಕುಮಾರ ಶ್ರೀಗಳ ಪುತ್ಥಳಿಗೆ ಮೆರವಣಿಗೆ ನಡೆಸಲಾಗುತ್ತದೆ.
ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗಸ್ವಾಮಿಜಿ, ಸದ್ಗುರು ಶ್ರೀ ಮಧುಸೂದನ ಸಾಯಿ ಹಾಗೂ ಸಿದ್ದಗಂಗಾ ಮಠದ ಉತ್ತರಾಧಿಕಾರಿ ಶಿವಸಿದ್ದೇಶ್ವರ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಕಾರ್ಯಾದರ್ಶಿ ಟಿ.ಕೆ.ನಂಜುಂಡಪ್ಪ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa