
ಕೋಲಾರ ೦೫ ಜನವರಿ (ಹಿ.ಸ) :
ಆ್ಯಂಕರ್ : ಭವಿಷ್ಯನಿಧಿ ಪಿಂಚಣಿ ಯೋಜನೆಯಡಿ ಜೀವನ ನಡೆಸುತ್ತಿರುವ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ ಬದುಕು ದುಸ್ತರವಾಗಿದ್ದು, ಮಾಸಿಕ ಪಿಂಚಣಿ ಮೊತ್ತವನ್ನು ಕನಿಷ್ಠ ೭,೫೦೦ ರೂಪಾಯಿಗಳಿಗೆ ಹೆಚ್ಚಿಸಬೇಕು ಹಾಗೂ ತುಟ್ಟಿಭತ್ಯೆ ಮತ್ತು ಉಚಿತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ರಾಷ್ಟ್ರೀಯ ಸಂಘರ್ಷ ಸಮಿತಿಯ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಜಿಲ್ಲಾ ರಾಷ್ಟಿçÃಯ ಸಂಘರ್ಷ ಸಮಿತಿಯಿಂದ ಅಪರ ಜಿಲ್ಲಾಧಿಕಾರಿಗಳಾದ ಎಸ್.ಎಂ. ಮಂಗಲ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಮನವಿಯನ್ನು ಕೇಂದ್ರ ಕಾರ್ಮಿಕ ಸಚಿವರು, ವಿತ್ತ ಸಚಿವರು ಹಾಗೂ ಪ್ರಧಾನ ಮಂತ್ರಿಗಳಿಗೆ ತಲುಪಿಸಿ, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ಪ್ರಸ್ತುತ ನೀಡುತ್ತಿರುವ ಅಲ್ಪ ಪ್ರಮಾಣದ ಪಿಂಚಣಿಯಲ್ಲಿ ಜೀವನ ಸಾಗಿಸುವುದು ಅಸಾಧ್ಯವಾಗಿದೆ. ಆದ್ದರಿಂದ ಈ ಕೆಳಗಿನ ಬೇಡಿಕೆಗಳನ್ನು ಈಡೇರಿಸಲೇಬೇಕು ಎಂದು ಆಗ್ರಹಿಸಿದರು.
ಕನಿಷ್ಠ ಮಾಸಿಕ ಪಿಂಚಣಿಯನ್ನು ೭,೫೦೦ ರೂಪಾಯಿಗಳಿಗೆ ನಿಗದಿಪಡಿಸಬೇಕು. ಬೆಲೆ ಏರಿಕೆಗೆ ಅನುಗುಣವಾಗಿ ಕಾಲಕಾಲಕ್ಕೆ ತುಟ್ಟಿಭತ್ಯೆ (ನೀಡಬೇಕು. ನಿವೃತ್ತ ನೌಕರರು ಮತ್ತು ಅವರ ಸಂಗಾತಿಗೆ ಸಮಗ್ರ ವೈದ್ಯಕೀಯ ವಿಮಾ ಸೌಲಭ್ಯ ಒದಗಿಸಬೇಕು. ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ಹೆಚ್ಚಿನ ಪಿಂಚಣಿಯ ಸೌಲಭ್ಯವನ್ನು ಜಾರಿಗೊಳಿಸಬೇಕು.
ಇದೇ ಸಂದರ್ಭದಲ್ಲಿ, ಮುಂಬರುವ ದಿನಗಳಲ್ಲಿ ಸಮಿತಿ ವತಿಯಿಂದ ಹಮ್ಮಿಕೊಳ್ಳುವ ಎಲ್ಲಾ ಕಾರ್ಯಕ್ರಮಗಳಲ್ಲಿ ಮತ್ತು ಹೋರಾಟಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಹಾಗೂ ನಿವೃತ್ತ ನೌಕರರು ಸಕ್ರಿಯವಾಗಿ ಭಾಗವಹಿಸಿ ಹೋರಾಟವನ್ನು ಬಲಪಡಿಸಬೇಕೆಂದು ಮನವಿ ಮಾಡಲಾಯಿತು.
ಸಮಿತಿಯ ಮುಖಂಡರಾದ ಮೇಲೂರು ಅಮರ್, ಡಿಸ್ಕೋ ಶ್ರೀನಿವಾಸ್, ನಾ. ನಾರಾಯಣಸ್ವಾಮಿ ಮತ್ತು ಮಲ್ಲೇಶಯ್ಯ ಮಾತನಾಡಿ, ವರ್ಷಗಳ ಕಾಲ ದೇಶದ ಅಭಿವೃದ್ಧಿಗೆ ಶ್ರಮಿಸಿದ ಕಾರ್ಮಿಕ ವರ್ಗವು ಇಂದು ನಿವೃತ್ತಿಯ ನಂತರ ಸಂಕಷ್ಟದಲ್ಲಿದೆ. ಕೇಂದ್ರ ಸರ್ಕಾರವು ಕೂಡಲೇ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ದೆಹಲಿ ಚಲೋ ಸೇರಿದಂತೆ ಹಂತ ಹಂತವಾಗಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು, ಎಂದು ಎಚ್ಚರಿಸಿದರು.
ಚಿತ್ರ : ಪಿಂಚಣಿ ಏರಿಕೆಗೆ ಒತ್ತಾಯಿಸಿ ಜಿಲ್ಲಾ ರಾಷ್ಟಿçÃಯ ಸಂಘರ್ಷ ಸಮಿತಿಯಿಂದ ಕೋಲಾರ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್