
ಕೊಪ್ಪಳ, 05 ಜನವರಿ (ಹಿ.ಸ.) :
ಆ್ಯಂಕರ್ : ಕೊಪ್ಪಳ ತಾಲೂಕಿನ ಹಿಟ್ನಾಳ ಬಳಿ ರೈಲ್ವೆ ಮೇಲ್ಸೇತುವೆ (ಆರ್‌ಒಬಿ) ಕಾಮಗಾರಿಯ ಶಂಕು ಸ್ಥಾಪನೆ ಕಾರ್ಯಕ್ರಮದ ವೇಳೆ ರಾಜಕೀಯ ಗಲಾಟೆ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ನಡುವೆ ವಾಗ್ವಾದಕ್ಕೆ ಒಳಪಟ್ಟಿದ್ದು, ಕೆಲ ಕಾರ್ಯಕರ್ತರು ಸಚಿವರನ್ನು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಉದ್ವಿಗ್ನತೆಗೆ ಕಾರಣವಾಯಿತು.
ಹಿಟ್ನಾಳದಲ್ಲಿ ಗಿಣಿಗೇರಾ–ಮುನಿರಾಬಾದ್ ರೈಲು ನಿಲ್ದಾಣಗಳ ನಡುವಿನ ಲೆವಲ್ ಕ್ರಾಸಿಂಗ್ ನಂ.77ರ ಬದಲಿಗೆ ರಸ್ತೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುತ್ತಿತ್ತು. ಈ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡ ಬಳಿಕ ಆಂಜನಾದ್ರಿ ಬೆಟ್ಟ ಹಾಗೂ ಹುಲಿಗೆಮ್ಮ ದೇವಸ್ಥಾನಕ್ಕೆ ಸಂಚಾರ ಇನ್ನಷ್ಟು ಸುಲಭವಾಗಲಿದೆ.
ಆದರೆ, ಕಾರ್ಯಕ್ರಮದ ಬ್ಯಾನರ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹಾಗೂ ಸಂಸದ ರಾಜಶೇಖರ ಹಿಟ್ನಾಳ ಅವರ ಹೆಸರುಗಳಿಲ್ಲದಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.
ಇದೇ ವೇಳೆ, ಸಚಿವ ಸೋಮಣ್ಣ ಅವರು “ಕಾಂಗ್ರೆಸ್ ಪಟಾಲಂ” ಎಂದು ಮಾಡಿದ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಚಿವ ಸೋಮಣ್ಣ, ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಸಂಸದ ರಾಜಶೇಖರ ಹಾಗೂ ಶಾಸಕ ರಾಘವೇಂದ್ರ ಅವರ ಬೆಂಬಲಿಗರ ನಡುವೆ ವಾಗ್ವಾದ ಹೆಚ್ಚಾಯಿತು.
ಉದ್ವಿಗ್ನ ಪರಿಸ್ಥಿತಿಯಲ್ಲಿ ವೇದಿಕೆಯಲ್ಲಿ ಇಡಲಾಗಿದ್ದ ಕುರ್ಚಿಗಳನ್ನು ಕಾರ್ಯಕರ್ತರು ಕಿತ್ತೆಸೆದ ಘಟನೆ ನಡೆದಿದೆ.
ಈ ಗಲಾಟೆ ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂದು ಸಚಿವ ವಿ. ಸೋಮಣ್ಣ ಆರೋಪಿಸಿದರು.
ಪರಿಸ್ಥಿತಿ ಕೈಮೀರುವುದನ್ನು ತಪ್ಪಿಸಲು ರೈಲು ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸಪಟ್ಟರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa