
ಬೆಂಗಳೂರು, 05 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ಪ್ರಮುಖ ನಾಯಕರು ಪಾಲ್ಗೊಂಡು, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟಗಳ ರೂಪುರೇಷೆಗಳ ಕುರಿತು ವಿಸ್ತೃತ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸದಾನಂದ ಗೌಡ, ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ರಾಜ್ಯ ಸಹ ಉಸ್ತುವಾರಿಗಳಾದ ಪೊಂಗುಲೆಟಿ ಸುಧಾಕರ್ ರೆಡ್ಡಿ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಡಾ. ಅಶ್ವತ್ಥ ನಾರಾಯಣ, ಸಂಸದರಾದ ಗೋವಿಂದ ಎಂ. ಕಾರಜೋಳ, ಮಾಜಿ ಸಚಿವ ಸಿ.ಟಿ. ರವಿ, ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳು, ಆಡಳಿತಾತ್ಮಕ ವೈಫಲ್ಯಗಳು ಹಾಗೂ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪಕ್ಷ ಸಂಘಟಿತ ಹೋರಾಟ ನಡೆಸುವ ಅಗತ್ಯವಿದೆ ಎಂಬುದರ ಮೇಲೆ ಸಭೆಯಲ್ಲಿ ಒತ್ತು ನೀಡಲಾಯಿತು. ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಹೋರಾಟ, ಜನಸಂಪರ್ಕ ಕಾರ್ಯಕ್ರಮಗಳು ಹಾಗೂ ಪಕ್ಷದ ಸಂಘಟನೆ ಬಲಪಡಿಸುವ ಕುರಿತು ನಾಯಕರ ನಡುವೆ ಚರ್ಚೆ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa