
ಹಾಸನ, 07 ಜನವರಿ (ಹಿ.ಸ.) :
ಆ್ಯಂಕರ್ : ಮೆಕ್ಕೆಜೋಳ ವಹಿವಾಟಿನ ಆಧಾರದ ಮೇಲೆ ರೈತರಿಗೆ ವ್ಯತ್ಯಾಸದ ಮೊತ್ತ ಪಾವತಿಗಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ನೋಂದಣಿ ಕೇಂದ್ರ ಸ್ಥಾಪನೆಗೆ ಕ್ರಮ ವಹಿಸುವಂತೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿಯಲ್ಲಿ 2025-26ನೇ ಸಾಲಿನಲ್ಲಿ ಮೆಕ್ಕೆಜೋಳದ ಧಾರಣೆಗೆ ನಿಯಂತ್ರಿತ ಮಾರುಕಟ್ಟೆಗಳಲ್ಲಿ ಆಗುವ ವಹಿವಾಟಿನ ಆಧಾರದ ಮೇಲೆ ರೈತರಿಗೆ ವ್ಯತ್ಯಾಸದ ಮೊತ್ತವನ್ನು ಪಾವತಿಸುವ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ಆದೇಶದಂತೆ ಕ್ವಿಂಟಾಲ್‌ಗೆ 2150 ರೂಪಾಯಿಗಿಂತ ಕಡಿಮೆ ದರದಲ್ಲಿ ಮಾರಾಟವಾದಲ್ಲಿ ವ್ಯತ್ಯಾಸದ ಮೊತ್ತ ಪಾವತಿಯ ವೇಳೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕು. ಕೃಷಿ ಇಲಾಖೆಯಿಂದ ಗುಣಮಟ್ಟ ಪರಿಶೀಲನೆಗೆ ತಾಂತ್ರಿಕ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದರು.
ಜಿಲ್ಲೆಗೆ ನಿಗದಿಪಡಿಸಿರುವ ಮೆಕ್ಕೆಜೋಳದ ನೋಂದಣಿ ಕಾರ್ಯವನ್ನು ಬಯೋಮೆಟ್ರಿಕ್ ಆಧಾರಿತವಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಸಂಸ್ಥೆಯು ನಿರ್ವಹಿಸಬೇಕು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಯು ಯು.ಎಂ.ಪಿ. ತಂತ್ರಾಂಶದಲ್ಲಿ ದಾಖಲಾಗಿರುವ ನೋಂದಾಯಿತ ರೈತರ ಮಾರಾಟದ ದೃಢೀಕೃತ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದವರು ಪರಿಶೀಲಿಸಿ ಡಿ.ಬಿ.ಟಿ. ಮೂಲಕ ವ್ಯತ್ಯಾಸದ ಮೊತ್ತವನ್ನು ರೈತರಿಗೆ ಪಾವತಿಸಲು ತಿಳಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಅರುಣ್ ಕುಮಾರ್, ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರಾದ ಶ್ರೀಹರಿ, ಎ.ಪಿ.ಎಂ.ಸಿ ಕಾರ್ಯದರ್ಶಿ ಮಧು ಮತ್ತಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa