ಸಾರ್ವಜನಿಕ ಸೇವೆ ಕಂದಾಯ ಇಲಾಖೆಯ ಪ್ರಮುಖ ಜವಾಬ್ದಾರಿ : ನವೀನ್‌ರಾಜ್ ಸಿಂಗ್
ಹಾಸನ, 08 ಜನವರಿ (ಹಿ.ಸ.) : ಆ್ಯಂಕರ್ : ಕಂದಾಯ ಇಲಾಖೆ ಜನಸಾಮಾನ್ಯರಿಗೆ ನೇರವಾಗಿ ಸಂಪರ್ಕ ಹೊಂದಿರುವ ಮಾತೃ ಇಲಾಖೆಯಾಗಿದ್ದು, ಬದಲಾದ ನಿಯಮಗಳನ್ನು ಅರಿತು ಸಾರ್ವಜನಿಕರಿಗೆ ಪರಿಣಾಮಕಾರಿ ಸೇವೆ ಒದಗಿಸುವುದು ಇಲಾಖೆಯ ಜವಾಬ್ದಾರಿ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಜ
Seminar


ಹಾಸನ, 08 ಜನವರಿ (ಹಿ.ಸ.) :

ಆ್ಯಂಕರ್ : ಕಂದಾಯ ಇಲಾಖೆ ಜನಸಾಮಾನ್ಯರಿಗೆ ನೇರವಾಗಿ ಸಂಪರ್ಕ ಹೊಂದಿರುವ ಮಾತೃ ಇಲಾಖೆಯಾಗಿದ್ದು, ಬದಲಾದ ನಿಯಮಗಳನ್ನು ಅರಿತು ಸಾರ್ವಜನಿಕರಿಗೆ ಪರಿಣಾಮಕಾರಿ ಸೇವೆ ಒದಗಿಸುವುದು ಇಲಾಖೆಯ ಜವಾಬ್ದಾರಿ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‌ರಾಜ್ ಸಿಂಗ್ ತಿಳಿಸಿದ್ದಾರೆ.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ ಕರ್ನಾಟಕ ಭೂಕಂದಾಯ ನಿಯಮ–1966ರ ತಿದ್ದುಪಡಿಗಳ ಕುರಿತು ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಲಕಾಲಕ್ಕೆ ಕಂದಾಯ ಇಲಾಖೆಗೆ ಸಂಬಂಧಿಸಿದ ಕಾಯಿದೆಗಳು ಮತ್ತು ನಿಯಮಗಳಲ್ಲಿ ಬದಲಾವಣೆಗಳಾಗುತ್ತಿದ್ದು, ಇಂತಹ ತರಬೇತಿ ಕಾರ್ಯಾಗಾರಗಳ ಮೂಲಕ ಹೊಸ ನಿಯಮಗಳನ್ನು ಅರ್ಥಮಾಡಿಕೊಂಡು ಉತ್ತಮ ಸೇವೆ ನೀಡಬೇಕು ಎಂದು ಅವರು ಹೇಳಿದರು. ಕಾಯಿದೆಗಳನ್ನು ತಿಳಿದುಕೊಳ್ಳದೆ ಕಾರ್ಯನಿರ್ವಹಿಸಿದರೆ ತಪ್ಪುಗಳಾಗುವ ಸಾಧ್ಯತೆ ಇರುವುದರಿಂದ ಸಿಬ್ಬಂದಿಗಳು ಎಚ್ಚರ ವಹಿಸಬೇಕು ಎಂದರು.

ಕಂದಾಯ ಇಲಾಖೆಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದ್ದು, ಯಾವುದೇ ದೋಷಗಳು ಸಂಭವಿಸದಂತೆ ಜಾಗರೂಕತೆ ಅಗತ್ಯವಿದೆ. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ನೀಡುವ ಮಾಹಿತಿಯನ್ನು ಸರಿಯಾಗಿ ಗ್ರಹಿಸಿ, ಗೊಂದಲಗಳಿದ್ದಲ್ಲಿ ತಕ್ಷಣವೇ ಪರಿಹರಿಸಿಕೊಳ್ಳಬೇಕು ಎಂದು ಸೂಚಿಸಿದರು.

ಭೂಸ್ವಾಧೀನ ಪ್ರಕ್ರಿಯೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ಕಂದಾಯ ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸರ್ಕಾರದ ಆದಾಯದಲ್ಲಿ ಭೂ ಕಂದಾಯ ಮಾತ್ರವಲ್ಲದೆ ಜಿಎಸ್‌ಟಿ, ಸಾರಿಗೆ ಸೇರಿದಂತೆ ಇತರ ಇಲಾಖೆಗಳ ಆದಾಯವೂ ಪ್ರಮುಖವಾಗಿದೆ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಮಾತನಾಡಿ, ಭೂಕಂದಾಯ ನಿಯಮಗಳಿಗೆ ಈಗಾಗಲೇ ಹಲವು ತಿದ್ದುಪಡಿಗಳನ್ನು ತರಲಾಗಿದ್ದು, ಎಲ್ಲಾ ಕಂದಾಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಬದಲಾವಣೆಗಳಿಗೆ ಹೊಂದಿಕೊಳ್ಳಬೇಕು. ತಿದ್ದುಪಡಿ ವಿಧೇಯಕಗಳು, ಭೂ ಪರಿವರ್ತನೆ ಸಂಬಂಧಿತ ಹೊಸ ನಿಯಮಗಳು ಹಾಗೂ ನ್ಯಾಯಾಲಯದ ತೀರ್ಪುಗಳನ್ನು ಅರ್ಥಮಾಡಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್‌ಗಳು ಮತ್ತು ಸಿಬ್ಬಂದಿಗಳು ಹೆಚ್ಚಿನ ಗಮನಹರಿಸಿ ಕರ್ತವ್ಯ ನಿರ್ವಹಿಸಬೇಕೆಂದು ಅವರು ಸೂಚಿಸಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್ ಸೇರಿದಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande