ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ ; ಇಬ್ಬರ ಬಂಧನ
ಗದಗ, 08 ಜನವರಿ (ಹಿ.ಸ.) : ಆ್ಯಂಕರ್ : ಗದಗ ತಾಲೂಕಿನ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಗದಗ ಗ್ರಾಮೀಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜನವರಿ 6ರಂದು ಸರ್ಕಾರಿ ಬಸ್ ನಿಲ್ಲಿಸುವ ವಿಚಾರಕ್ಕ
ಫೋಟೋ


ಗದಗ, 08 ಜನವರಿ (ಹಿ.ಸ.) :

ಆ್ಯಂಕರ್ : ಗದಗ ತಾಲೂಕಿನ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಗದಗ ಗ್ರಾಮೀಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜನವರಿ 6ರಂದು ಸರ್ಕಾರಿ ಬಸ್ ನಿಲ್ಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಕಂಡಕ್ಟರ್ ನೇತ್ರಾವತಿ ಪತ್ರಿಮಠ ಅವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಕಪಾಳಕ್ಕೆ ಹೊಡೆದು ಹಲ್ಲೆ ನಡೆಸಲಾಗಿತ್ತು. ಘಟನೆಯ ದಿನ ಸರ್ಕಾರಿ ಬಸ್ ತನ್ನ ನಿಗದಿತ ನಿಲ್ದಾಣದಲ್ಲಿ ನಿಲ್ಲಿಸದ ಹಿನ್ನೆಲೆ ವಿದ್ಯಾರ್ಥಿಗಳ ಪೋಷಕರಾದ ಆರೋಪಿಗಳು ಆಕ್ರೋಶಗೊಂಡಿದ್ದಾರೆ ಎನ್ನಲಾಗಿದೆ.

ಬಸ್ ನಿಲ್ಲಿಸುವಂತೆ ಕಂಡಕ್ಟರ್‌ರಿಗೆ ಒತ್ತಾಯಿಸಿದ ವೇಳೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆರೋಪಿಗಳು ಏಕಾಏಕಿ ಮಹಿಳಾ ಕಂಡಕ್ಟರ್ ನೇತ್ರಾವತಿ ಪತ್ರಿಮಠ ಅವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಕಪಾಳಕ್ಕೆ ಹೊಡೆದು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಗಾಯಗೊಂಡ ಮಹಿಳಾ ಕಂಡಕ್ಟರ್ ತೀವ್ರವಾಗಿ ಮನನೊಂದು, ತಕ್ಷಣ ಗದಗ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ತನಿಖೆ ವೇಳೆ ದೊರೆತ ಖಚಿತ ಮಾಹಿತಿ ಮೇರೆಗೆ ಆರೋಪಿಗಳಾದ ಪ್ರಕಾಶ ಸಂಕಣ್ಣವರ ಹಾಗೂ ನೀಲಪ್ಪ ಜಂತ್ಲಿ ಅವರನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕ ಸೇವೆಯಲ್ಲಿ ನಿರತರಾಗಿರುವ ಮಹಿಳಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವುದು ಗಂಭೀರ ಅಪರಾಧವಾಗಿದ್ದು, ಇಂತಹ ಕೃತ್ಯಗಳನ್ನು ಸಹಿಸುವುದಿಲ್ಲ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಘಟನೆಯಿಂದ ಸರ್ಕಾರಿ ಬಸ್ ಸಿಬ್ಬಂದಿ ವಲಯದಲ್ಲಿ ಆತಂಕ ಉಂಟಾಗಿದ್ದು, ಮಹಿಳಾ ಸಿಬ್ಬಂದಿಗೆ ಸಮರ್ಪಕ ಭದ್ರತೆ ಒದಗಿಸುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿವೆ. ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande