
ಚಿತ್ರದುರ್ಗ, 09 ಜನವರಿ (ಹಿ.ಸ.) :
ಆ್ಯಂಕರ್ : ಬರುವ ಜನವರಿ 14ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಅರ್ಥಪೂರ್ಣ, ಸುವ್ಯವಸ್ಥಿತ ಹಾಗೂ ಶಾಂತಿಯುತವಾಗಿ ಆಚರಿಸಲು ಅಗತ್ಯ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಪ್ರಭಾರ ಉಪವಿಭಾಗಾಧಿಕಾರಿ ಎನ್. ವೆಂಕಟೇಶ್ ನಾಯ್ಕ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು. ಮೆರವಣಿಗೆ ಸಾಗುವ ಮಾರ್ಗದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಚಾರ ದಟ್ಟಣೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ಅಗತ್ಯವಿದೆ ಎಂದು ತಿಳಿಸಿದರು.
ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಜನಪ್ರತಿನಿಧಿಗಳನ್ನು ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಯೇ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ವೇದಿಕೆಯಲ್ಲಿ ಸಿದ್ದರಾಮೇಶ್ವರರ ಭಾವಚಿತ್ರವನ್ನು ಇರಿಸಿ ಗಣ್ಯರಿಂದ ಪುಷ್ಪನಮನ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಯಾವುದೇ ಅಡಚಣೆಗಳು ಉಂಟಾಗದಂತೆ ವಿವಿಧ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಜಯಂತಿ ಕಾರ್ಯಕ್ರಮದ ಅಂಗವಾಗಿ ಹಿರಿಯೂರಿನ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಬಸವರಾಜ ಟಿ. ಬೆಳಗಟ್ಟ ಅವರು ಶ್ರೀ ಶಿವಯೋಗಿ ಸಿದ್ದರಾಮೇಶ್ವರರ ಜೀವನ, ಸಾಧನೆ ಹಾಗೂ ಬೋಧನೆಗಳ ಕುರಿತು ಉಪನ್ಯಾಸ ನೀಡಲಿದ್ದಾರೆ. ಜೊತೆಗೆ ಗೀತಗಾಯನ ಕಾರ್ಯಕ್ರಮವೂ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ. ಗುರುನಾಥ್ ಸಭೆಯಲ್ಲಿ ಮಾಹಿತಿ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ತಹಶೀಲ್ದಾರ್ ಗೋವಿಂದರಾಜು, ಭೋವಿ ಸಮಾಜದ ಮುಖಂಡರಾದ ತಿಪ್ಪೇಸ್ವಾಮಿ, ಲಕ್ಷ್ಮಣ, ಗೀತಾ ಗೋವಿಂದರಾಜು, ಮಂಜುನಾಥ್, ಡಿ.ಸಿ. ಮೋಹನ್ ಸೇರಿದಂತೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa