
ಬೆಂಗಳೂರು, 01 ಅಕ್ಟೋಬರ್ (ಹಿ.ಸ.):
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಹಲವು ಕಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಭಾರಿ ಮಳೆಯ ಮುನ್ಸೂಚನೆ ಇರುವ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿಗೂ ಮಳೆ ಅಬ್ಬರ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯೊಂದಿಗೆ ಗುಡುಗು-ಮಿಂಚು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮಳೆಯ ಸಂದರ್ಭದಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಗುಡುಗು-ಮಿಂಚಿನ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನಲ್ಲೂ ಮಳೆ: ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.
ಒಟ್ಟಾರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು, ಗುಡುಗು-ಮಿಂಚು ಹಾಗೂ ಗಾಳಿಯೊಂದಿಗೆ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R