
ಗದಗ, 10 ಅಕ್ಟೋಬರ್ (ಹಿ.ಸ.)
ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಡ ರಾತ್ರಿ ನಡೆದಿದೆ. ಲಕ್ಕುಂಡಿ ಗ್ರಾಮದ ಬಸವಣ್ಣೆಪ್ಪ ಮಾಡಲಗೇರಿ (62) ಕೊಲೆಯಾದ ವ್ಯಕ್ತಿ.
ಬಸವಣ್ಣೆಪ್ಪ ಅವರು ಜಮೀನಿಗೆ ತೆರಳಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಕತ್ತನ್ನು ಸೀಳಿ, ತಲೆಗೆ ಬಲವಾಗಿ ಹೊಡೆದು ಹತ್ಯೆ ಮಾಡಲಾಗಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಹತ್ಯೆಗೈದು ಪರಾರಿ:
ಹತ್ಯೆ ನಡೆಸಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷ ಸೇರಿದಂತೆ ಹತ್ಯೆಗೆ ಕಾರಣವಾಗಿರಬಹುದಾದ ವಿವಿಧ ಆಯಾಮಗಳ ಕುರಿತು ತನಿಖೆಯಿಂದ ಮಾಹಿತಿ ಹೊರಬರಬೇಕಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ:
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಡಿವೈಎಸ್ಪಿ ಮುರ್ತುಜ್ ಖಾದ್ರಿ ಹಾಗೂ ಸಿಪಿಐ ಸಿದ್ದಲಿಂಗೇಶ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.
ಗ್ರಾಮದಲ್ಲಿ ಆತಂಕ
ಮಾಜಿ ಗ್ರಾಮ ಪಂಚಾಯಿತಿ ಸದಸ್ಯನನ್ನು ರಾತ್ರಿ ವೇಳೆ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಲಕ್ಕುಂಡಿ ಗ್ರಾಮದಲ್ಲಿ ಆತಂಕ ಮೂಡಿಸಿದೆ. ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಈ ಪ್ರಕರಣದ ಹಿಂದಿನ ಕಾರಣವೇನು? ಹತ್ಯೆಗೈದವರು ಯಾರು? ಎಂಬ ಪ್ರಶ್ನೆಗಳಿಗೆ ಪೊಲೀಸ್ ತನಿಖೆಯ ಬಳಿಕ ಉತ್ತರ ಸಿಗಬೇಕಿದೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP