ಮೋಹನ ಲಿಂಬಿಕಾಯಿ ಗೆಲುವಿಗೆ ಹೆಚ್ಚಿನ ಮತದಾನಕ್ಕೆ ಶಾಸಕ ಕೋನರಡ್ಡಿ ಮನವಿ
ಹುಬ್ಬಳ್ಳಿ, 10 ಅಕ್ಟೋಬರ್ (ಹಿ.ಸ.): ಪಶ್ಚಿಮ ಪದವೀಧರರ ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ನವಲಗುಂದ ವಿಧಾನಸಭಾ ಕ್ಷೇತ್ರದ ಪದವೀಧರ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು ಎಂದು ಶಾಸಕ ಎನ್‌.ಎಚ್‌. ಕೋ
ಚುನಾವಣಾ ಪ್ರಚಾರ


ಹುಬ್ಬಳ್ಳಿ, 10 ಅಕ್ಟೋಬರ್ (ಹಿ.ಸ.):

ಪಶ್ಚಿಮ ಪದವೀಧರರ ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ನವಲಗುಂದ ವಿಧಾನಸಭಾ ಕ್ಷೇತ್ರದ ಪದವೀಧರ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು ಎಂದು ಶಾಸಕ ಎನ್‌.ಎಚ್‌. ಕೋನರಡ್ಡಿ ಮನವಿ ಮಾಡಿದರು.

ಚುನಾವಣೆಯ ಪೂರ್ವಭಾವಿ ಸಿದ್ಧತೆ ಕುರಿತು ನವಲಗುಂದದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಅಭ್ಯರ್ಥಿ ಮೋಹನ ಲಿಂಬಿಕಾಯಿ ವೃತ್ತಿಯಲ್ಲಿ ನ್ಯಾಯವಾದಿಯಾಗಿದ್ದು, ವಿಶ್ವವಿದ್ಯಾಲಯದ ಸೆನೆಟ್‌, ಸಿಂಡಿಕೇಟ್‌ ಹಾಗೂ ಅಕಾಡೆಮಿಕ್‌ ಕೌನ್ಸಿಲ್‌ ಸದಸ್ಯರಾಗಿ, ರಾಜ್ಯ ವಕೀಲರ ಪರಿಷತ್ತಿನ ಉಪಾಧ್ಯಕ್ಷರಾಗಿ, ಪ್ರಾಚಾರ್ಯರಾಗಿ ಹಾಗೂ ಮಾಜಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಅನುಭವ ಹೊಂದಿದ್ದಾರೆ. ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವ ಕ್ರಿಯಾಶೀಲ ಅಭ್ಯರ್ಥಿಯಾಗಿರುವ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಹೇಳಿದರು.

ನವಲಗುಂದ ಕ್ಷೇತ್ರದ ಪದವೀಧರರು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿ ಅಭ್ಯರ್ಥಿಯನ್ನು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ಪ್ರಥಮ ಪ್ರಾಶಸ್ತ್ಯದ ಮತ ನೀಡಲು ಲಿಂಬಿಕಾಯಿ ಮನವಿ

ಈ ಹಿಂದೆ ವಿಧಾನ ಪರಿಷತ್‌ ಸದಸ್ಯನಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಹಲವು ಅಭಿವೃದ್ಧಿಪರ ಕಾರ್ಯಗಳ ಜತೆಗೆ ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ್ದೇನೆ. ಇದೀಗ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಪದವೀಧರ ಮತದಾರರು ತಮ್ಮ ಹೆಸರಿನ ಮುಂದೆ ಒಂದನೇ ಪ್ರಾಶಸ್ತ್ಯದ ಮತವನ್ನು ಚಲಾಯಿಸಿ ಹೆಚ್ಚಿನ ಬಹುಮತದಿಂದ ಆಯ್ಕೆ ಮಾಡಬೇಕು ಎಂದು ಅಭ್ಯರ್ಥಿ ಮೋಹನ ಲಿಂಬಿಕಾಯಿ ಮನವಿ ಮಾಡಿದರು.

ಚಕ್ಕಡಿ ರಸ್ತೆಗಳನ್ನು ನಿರ್ಮಿಸುವ ಮೂಲಕ ರಾಜ್ಯದಲ್ಲಿಯೇ ಹೆಸರು ಗಳಿಸಿರುವ ನವಲಗುಂದ ಕ್ಷೇತ್ರದ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿ ವಹಿಸಿಕೊಂಡು ತಮ್ಮ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಅವರು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande