ರಾಜ್ಯ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಬಿಜೆಪಿ ನಿರ್ಧಾರ
ಎಸ್ಐಆರ್, ಫಾರಂ-7 ವಿವಾದ, ಬರ ನಿರ್ವಹಣೆ ಹಾಗೂ ಕಾರ್ಯಕರ್ತರ ವಿರುದ್ಧದ ಎಫ್ಐಆರ್ಗಳ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ
BJP-to-intensify-protest-against-Karnataka-government


ಬೆಂಗಳೂರು, 11 ಅಕ್ಟೋಬರ್ (ಹಿ.ಸ.):

ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜಕೀಯ ಹೋರಾಟವನ್ನು ತೀವ್ರಗೊಳಿಸಲು ಬಿಜೆಪಿ ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಭಾನುವಾರ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ , ಫಾರಂ-7 ಅರ್ಜಿಗಳ ವಿವಾದ, ಬರ ನಿರ್ವಹಣೆ ಹಾಗೂ ಪಕ್ಷದ ಕಾರ್ಯಕರ್ತರ ವಿರುದ್ಧ ದಾಖಲಾಗುತ್ತಿರುವ ಎಫ್ಐಆರ್ಗಳ ಕುರಿತು ಚರ್ಚೆ ನಡೆಸಲಾಗಿದೆ.

ಸಭೆಯು ರಾಜ್ಯ ಬಿಜೆಪಿ ಸಹ ಉಸ್ತುವಾರಿ ಕೆ.ಎಸ್. ವೆಂಕಟೇಶ್ವರನ್ ಅವರ ನೇತೃತ್ವದಲ್ಲಿ ನಡೆದಿದ್ದು, ಪಕ್ಷದ ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ಕಾರ್ಯತಂತ್ರ ರೂಪಿಸುವ ಕುರಿತು ನಾಯಕರು ಸಮಾಲೋಚನೆ ನಡೆಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ವರದಿಯಾಗಿದೆ.

ಫಾರಂ-7 ವಿಚಾರದಲ್ಲಿ ಸರ್ಕಾರದ ವಿರುದ್ಧ ಆಕ್ಷೇಪಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಫಾರಂ-7 ಅರ್ಜಿಗಳ ಸಲ್ಲಿಕೆ ಹಾಗೂ ಈ ಸಂಬಂಧ ಪಕ್ಷದ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸುವ ವಿಚಾರ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಗೆ ಬಂದಿದೆ.

ಈ ಕ್ರಮವನ್ನು ಬಿಜೆಪಿ ನಾಯಕರು ಪ್ರಶ್ನಿಸಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಆಕ್ಷೇಪ ಸಲ್ಲಿಸುವವರ ವಿರುದ್ಧ ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಫಾರಂ-7 ಅರ್ಜಿಗಳ ವಿಚಾರವಾಗಿ ದಾಖಲಾಗಿರುವ ಎಫ್ಐಆರ್ಗಳ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು

ರಾಜ್ಯಾದ್ಯಂತ ಪ್ರತಿಭಟನೆಗೆ ಸಿದ್ಧತೆಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ಬರ ನಿರ್ವಹಣೆ ಹಾಗೂ ಪಕ್ಷದ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಮುಂದಿಟ್ಟುಕೊಂಡು ಹೋರಾಟವನ್ನು ವಿಸ್ತರಿಸುವ ಕುರಿತು ಬಿಜೆಪಿ ಚಿಂತನೆ ನಡೆಸಿದೆ.

ಸರ್ಕಾರದ ವಿರುದ್ಧ ಸಾರ್ವಜನಿಕವಾಗಿ ಪ್ರತಿಭಟನೆ ನಡೆಸುವ ಮೂಲಕ ಪಕ್ಷದ ನಿಲುವು ಜನರಿಗೆ ತಲುಪಿಸುವುದು ಹಾಗೂ ಸಂಘಟನೆಯನ್ನು ತಳಮಟ್ಟದಲ್ಲಿ ಬಲಪಡಿಸುವುದು ಸಭೆಯ ಚರ್ಚೆಯ ಪ್ರಮುಖ ಅಂಶಗಳಾಗಿವೆ.

ಮುಂಬರುವ ವಿಧಾನ ಪರಿಷತ್ ಚುನಾವಣೆಗಳ ಸಿದ್ಧತೆ, ಪಕ್ಷದ ಸಂಘಟನೆ ಬಲವರ್ಧನೆ ಮತ್ತು ಮುಂದಿನ ರಾಜಕೀಯ ಕಾರ್ಯಚಟುವಟಿಕೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಅಶೋಕ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande