
ಮೈಸೂರು, 11 ಅಕ್ಟೋಬರ್ (ಹಿ.ಸ.):
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ 416ನೇ ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು ಚಾಲನೆ ದೊರೆಯಲಿದೆ.
ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 11.50ರಿಂದ ಮಧ್ಯಾಹ್ನ 12.13ರವರೆಗಿನ ಶುಭ ಧನುರ್ ಲಗ್ನದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.
ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ಶಾಸಕ ಜಿ.ಟಿ. ದೇವೇಗೌಡ ಸೇರಿದಂತೆ ಕೇಂದ್ರ ಮತ್ತು ರಾಜ್ಯದ ಹಲವು ಮುಖಂಡರು ಹಾಗೂ ನೂರಾರು ಮಠಾಧೀಶರು ಭಾಗವಹಿಸಲಿದ್ದಾರೆ.
ದಸರಾ ಉದ್ಘಾಟನೆಯ ಹಿನ್ನೆಲೆಯಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.
ಅರಮನೆಯಲ್ಲಿ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನ
ಮೈಸೂರು ಅರಮನೆಯಲ್ಲಿ ಮುಂಜಾನೆಯಿಂದಲೇ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿವೆ. ಬೆಳಿಗ್ಗೆ 6ರಿಂದ 7.12ರ ಅವಧಿಯಲ್ಲಿ ರತ್ನಖಚಿತ ಸಿಂಹಾಸನಕ್ಕೆ ಸಿಂಹಮುಖ ಜೋಡಣೆ ಕಾರ್ಯ ನೆರವೇರಿಸಲಾಯಿತು.
ಬೆಳಿಗ್ಗೆ 8.35ರಿಂದ 9.05ರ ಶುಭ ಮುಹೂರ್ತದಲ್ಲಿ ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕಂಕಣಧಾರಣೆ ಮಾಡಲಾಯಿತು.
ರಾಜಪೋಷಾಕಿನಲ್ಲಿ ಯದುವೀರ್ ಒಡೆಯರ್ ಅವರು ಬೆಳಿಗ್ಗೆ 11.50ರಿಂದ ಮಧ್ಯಾಹ್ನ 12.13ರವರೆಗಿನ ಶುಭ ಲಗ್ನದಲ್ಲಿ ಸಿಂಹಾಸನಾರೋಹಣ ಮಾಡಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ.
ಮಧ್ಯಾಹ್ನ 1.40ರಿಂದ 2.05ರವರೆಗೆ ಚಾಮುಂಡಿ ತಾಯಿಯ ಉತ್ಸವಮೂರ್ತಿಯನ್ನು ಚಾಮುಂಡೇಶ್ವರಿ ತೊಟ್ಟಿಯಿಂದ ಕನಕ ತೊಟ್ಟಿಗೆ ತಂದು ನವರಾತ್ರಿ ಪೂಜೆ ನೆರವೇರಿಸಲಾಗುತ್ತದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.