
ಮೈಸೂರು, 11 ಅಕ್ಟೋಬರ್ (ಹಿ.ಸ.):
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ 416ನೇ ನಾಡಹಬ್ಬ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು.
ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 11.50ರಿಂದ 12.13ರವರೆಗಿನ ಶುಭ ಧನುರ್ ಲಗ್ನದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳ್ಳಿ ರಥದಲ್ಲಿದ್ದ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ನಿ ಉಷಾ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದಾಗ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಬಳಿಕ ಮುಖ್ಯಮಂತ್ರಿ ಅವರು ಸಾಂಪ್ರದಾಯಿಕ ನಂದಿಧ್ವಜ ಕಂಬಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಜಾನಪದ ಕಲಾತಂಡಗಳ ವಾದ್ಯಮೇಳಗಳೊಂದಿಗೆ ಮೆರವಣಿಗೆಯಲ್ಲಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿದರು.
ದೇವಸ್ಥಾನದ ಮುಂಭಾಗದಲ್ಲಿ ಮುಖ್ಯಮಂತ್ರಿ ನಾಲ್ಕು ಈಡುಗಾಯಿಗಳನ್ನು ಒಡೆದು ಭಕ್ತಿ ಸಮರ್ಪಿಸಿದರು. ಬಳಿಕ ಮುಖ್ಯಮಂತ್ರಿ ದಂಪತಿ, ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳೊಂದಿಗೆ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಪೂಜಾ ವಿಧಿವಿಧಾನಗಳ ಬಳಿಕ ಗಣ್ಯರು ಮುಖ್ಯ ವೇದಿಕೆಗೆ ಆಗಮಿಸಿದರು. ಶುಭ ಧನುರ್ ಲಗ್ನದಲ್ಲಿ ಬೆಳ್ಳಿ ರಥದಲ್ಲಿ ವಿರಾಜಮಾನಳಾಗಿದ್ದ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಡಹಬ್ಬಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ವಹಿಸಿದ್ದರು. ವೇದಿಕೆಯಲ್ಲಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ರಿಜ್ವಾನ್ ಅರ್ಷದ್, ಈಶ್ವರ್ ಖಂಡ್ರೆ, ಡಾ. ಅಜಯ್ ಸಿಂಗ್, ಸಿ. ಪುಟ್ಟರಂಗಶೆಟ್ಟಿ ಹಾಗೂ ಮುಖ್ಯಮಂತ್ರಿ ಅವರ ಪತ್ನಿ ಉಷಾ ಶಿವಕುಮಾರ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.