
ಬಾಗಲಕೋಟೆ , 11 ಅಕ್ಟೋಬರ್ (ಹಿ.ಸ.)
ಮುಧೋಳ ಗ್ರಾಮೀಣ ಭಾಗದ ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸುಗಮ ಸಂಚಾರವೇ ಗಗನ ಕುಸುಮವಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿರುವುದರಿಂದ ರೈತರು ಹಾಗೂ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.
ತಾಲ್ಲೂಕಿನ ವಜ್ಜರಮಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಿಕಟ್ಟಿ ಭಾಗದ ಹುಡೇದ ಮಡ್ಡಿ ರಸ್ತೆಯಿಂದ ಕಿಶೋರಿ ಗ್ರಾಮದ ದೇವ ಮಟ್ಟೆವ್ವ ದೇವಸ್ಥಾನದವರೆಗಿನ ರಸ್ತೆ ಸಂಪೂರ್ಣ ಕಿತ್ತುಹೋಗಿದೆ. ರಸ್ತೆಯುದ್ದಕ್ಕೂ ಮೊಣಕಾಲುದ್ದದ ಗುಂಡಿಗಳು ನಿರ್ಮಾಣವಾಗಿದ್ದು, ಮಳೆ ಹಾಗೂ ವಾಹನಗಳ ಸಂಚಾರದಿಂದ ರಸ್ತೆ ಮತ್ತಷ್ಟು ಹದಗೆಟ್ಟಿದೆ. ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸ್ಥಳೀಯರಾದ ರಾಘವೇಂದ್ರ ಕೆರೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರಿಗೆ ನಿತ್ಯ ಅನಾನುಕೂಲ
ಮರಿಕಟ್ಟಿ ಭಾಗದಲ್ಲಿರುವ ಈ ರಸ್ತೆ ಬರಗಿ, ಅಮ್ಮಲಝರಿ, ವಜ್ಜರಮಟ್ಟಿ, ಮರಿಕಟ್ಟಿ ಹಾಗೂ ಕಿಶೋರಿ ಗ್ರಾಮಗಳ ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಈ ಗ್ರಾಮಗಳ ನೂರಾರು ರೈತರು ಪ್ರತಿನಿತ್ಯ ಇದೇ ರಸ್ತೆಯ ಮೂಲಕ ತಮ್ಮ ಜಮೀನುಗಳಿಗೆ ತೆರಳುತ್ತಾರೆ. ಆದರೆ ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಬೈಕ್, ಸೈಕಲ್ ಸೇರಿದಂತೆ ಇತರೆ ವಾಹನಗಳಲ್ಲಿ ಸಂಚರಿಸುವುದು ಕಷ್ಟಕರವಾಗಿದೆ.
ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಮೇವು, ಕೃಷಿ ಪರಿಕರಗಳು ಹಾಗೂ ಇತರ ಭಾರದ ವಸ್ತುಗಳನ್ನು ದ್ವಿಚಕ್ರ ವಾಹನಗಳಲ್ಲಿ ಸಾಗಿಸುವ ಸಂದರ್ಭದಲ್ಲಿ ಗುಂಡಿಗಳಿಂದ ವಾಹನಗಳು ಪಂಚರ್ ಆಗಿ ನಡುರಸ್ತೆಯಲ್ಲೇ ನಿಂತಿರುವ ಘಟನೆಗಳು ಸಾಕಷ್ಟಿವೆ ಎಂದು ರೈತರು ತಿಳಿಸಿದ್ದಾರೆ.
ರಸ್ತೆ ತುಂಬ ಗುಂಡಿಗಳ ದರ್ಬಾರ್
ರಸ್ತೆಯುದ್ದಕ್ಕೂ ಗುಂಡಿಗಳು ಹಾಗೂ ಎದ್ದಿರುವ ಖಡಿಗಳಿಂದಾಗಿ ವಾಹನ ಸಂಚಾರ ದುಸ್ತರವಾಗಿದೆ. ವಿಶೇಷವಾಗಿ ರೈತರು ಮುಂಜಾನೆ ಹಾಗೂ ಸಂಜೆ ವೇಳೆ ಜಮೀನುಗಳಿಗೆ ತೆರಳುವ ಸಂದರ್ಭದಲ್ಲಿ ಹೆಚ್ಚು ಸಮಸ್ಯೆ ಎದುರಿಸುತ್ತಿದ್ದಾರೆ. ತುರ್ತು ಸಂದರ್ಭಗಳಲ್ಲಿ ವಾಹನಗಳನ್ನು ವೇಗವಾಗಿ ಕೊಂಡೊಯ್ಯಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದ್ದು, ವೃದ್ಧರು, ಮಹಿಳೆಯರು ಹಾಗೂ ಮಕ್ಕಳು ಈ ಮಾರ್ಗದಲ್ಲಿ ಸಂಚರಿಸಲು ಹಿಂದೇಟು ಹಾಕುವಂತಾಗಿದೆ.
ಕೃಷಿಯನ್ನೇ ಅವಲಂಬಿಸಿರುವ ರೈತರಿಗೆ ಜಮೀನಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅತ್ಯಂತ ಮಹತ್ವದ್ದಾಗಿದೆ. ಆದರೆ ಹಲವು ದಿನಗಳಿಂದ ರಸ್ತೆ ದುರಸ್ತಿಯಾಗದೇ ಇರುವುದರಿಂದ ಕೃಷಿ ಚಟುವಟಿಕೆಗಳಿಗೂ ಪರೋಕ್ಷವಾಗಿ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೂಡಲೇ ದುರಸ್ತಿಗೆ ಆಗ್ರಹ
ರೈತರು ಹಾಗೂ ಸಾರ್ವಜನಿಕರು ಪ್ರತಿನಿತ್ಯ ಬಳಸುವ ಈ ರಸ್ತೆಯನ್ನು ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ರಸ್ತೆ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಿ, ಗುಂಡಿಗಳನ್ನು ಮುಚ್ಚುವುದರ ಜೊತೆಗೆ ರಸ್ತೆಯನ್ನು ಸಮರ್ಪಕವಾಗಿ ದುರಸ್ತಿ ಮಾಡಬೇಕು.
ಮುಂದಿನ ದಿನಗಳಲ್ಲಿ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಗುಣಮಟ್ಟದ ರಸ್ತೆ ನಿರ್ಮಿಸಬೇಕು ಎಂದು ಮರಿಕಟ್ಟಿ, ಬರಗಿ, ಅಮ್ಮಲಝರಿ, ವಜ್ಜರಮಟ್ಟಿ ಹಾಗೂ ಕಿಶೋರಿ ಭಾಗದ ರೈತರು ಒತ್ತಾಯಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande