ನಾಳೆ ವಿಜಯಪುರದಲ್ಲಿ ಕಾಂಗ್ರೆಸ್ ವಿರುದ್ದ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ವಿಜಯಪುರ, 11 ಅಕ್ಟೋಬರ್ (ಹಿ.ಸ.) ರಾಜ್ಯದಲ್ಲಿ ಭೀಕರ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಹೆಚ್ಚಿನ ಬರ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆಯಲ್ಲಿನ ಲೋಪದೋಷಗಳನ್ನು ಖಂಡಿಸಿ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವ
Protest


ವಿಜಯಪುರ, 11 ಅಕ್ಟೋಬರ್ (ಹಿ.ಸ.)

ರಾಜ್ಯದಲ್ಲಿ ಭೀಕರ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಹೆಚ್ಚಿನ ಬರ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆಯಲ್ಲಿನ ಲೋಪದೋಷಗಳನ್ನು ಖಂಡಿಸಿ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರ ವಿರುದ್ಧ ಕಾಂಗ್ರೆಸ್ನವರು ಆಧಾರರಹಿತ ಆರೋಪ ಮಾಡುತ್ತಿರುವುದನ್ನು ವಿರೋಧಿಸಿ ಯತ್ನಾಳ ನೇತೃತ್ವದಲ್ಲಿ ವಿಜಯಪುರ ನಗರದಲ್ಲಿ ಸೋಮವಾರ (ಅ.12) ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕೇಂದ್ರದ ಮಾಜಿ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಬೆಳಿಗ್ಗೆ 10.30ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯು ಗಾಂಧಿ ಚೌಕ್ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಈರಣ್ಣ ಆವಟಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ರೈತರು ಎದುರಿಸುತ್ತಿರುವ ಸಂಕಷ್ಟಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು. ರೈತರಿಗೆ ಸಮರ್ಪಕ ಬರ ಪರಿಹಾರ ಒದಗಿಸುವುದು ಸೇರಿದಂತೆ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಲಿದ್ದಾರೆ.

ಇದರೊಂದಿಗೆ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಂಡುಬಂದಿರುವ ಲೋಪದೋಷಗಳನ್ನು ಸರಿಪಡಿಸಬೇಕು ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಪ್ರತಿಭಟನೆಯಲ್ಲಿ ವ್ಯಕ್ತವಾಗಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರ ವಿರುದ್ಧ ಕಾಂಗ್ರೆಸ್ ನಾಯಕರು ಆಧಾರರಹಿತ ಆರೋಪಗಳನ್ನು ಮಾಡುತ್ತಿರುವುದು ಹಾಗೂ ಅವರ ತೇಜೋವಧೆಗೆ ಮುಂದಾಗುತ್ತಿರುವ ಧೋರಣೆಯನ್ನು ಖಂಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರತಿಭಟನೆಯಲ್ಲಿ ಜಿಲ್ಲೆಯ ರೈತರು, ವಿವಿಧ ರೈತ ಸಂಘಟನೆಗಳ ಪದಾಧಿಕಾರಿಗಳು, ರಾಜಕೀಯ ಹಾಗೂ ಸಾಮಾಜಿಕ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ವ್ಯಾಪಾರಸ್ಥರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು, ಮಹಿಳೆಯರು ಹಾಗೂ ವಿಜಯಪುರ ಮಹಾನಗರ ಪಾಲಿಕೆಯ ಹಾಲಿ ಮತ್ತು ಮಾಜಿ ಸದಸ್ಯರು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande