
ಬೆಂಗಳೂರು, 11 ಅಕ್ಟೋಬರ್ (ಹಿ.ಸ.):
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಮತ್ತು ನಮೂನೆ-7 ವಿಚಾರದಲ್ಲಿ ರಾಜ್ಯ ಸರ್ಕಾರವು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುವುದನ್ನು ಮುಂದುವರಿಸಿದರೆ, ಪೊಲೀಸ್ ಠಾಣೆಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗಳಿಗೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧರಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಕೆ ನೀಡಿದರು.
ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಸಹ ಉಸ್ತುವಾರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಕಾಸಂ ವೆಂಕಟೇಶ್ವರಲು ಅವರ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ಎಸ್ಐಆರ್ ನಮೂನೆ-7 ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಗೊಂದಲ ಸೃಷ್ಟಿಸುತ್ತಿದೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿರುವ ಸಂದರ್ಭದಲ್ಲಿ ರಾಜ್ಯದ ಉಚ್ಚ ನ್ಯಾಯಾಲಯವೂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಆರೋಪಿಸಿದರು.
ಖಾಯಂ ನಿವಾಸಿ ದೃಢಪತ್ರ ನೀಡುವ ಅಧಿಕಾರ ಹಿಂಪಡೆಯಲಿ
ರಾಜ್ಯ ಸರ್ಕಾರವು ಖಾಯಂ ನಿವಾಸಿ ದೃಢಪತ್ರ (ಪಿಆರ್‌ಸಿ) ನೀಡುವ ಅಧಿಕಾರವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪುರಸಭೆ ಆಯುಕ್ತರಿಗೂ ನೀಡಿರುವುದು ಸರಿಯಲ್ಲ. ಈ ಅಧಿಕಾರವನ್ನು ತಹಶೀಲ್ದಾರ್ ಮತ್ತು ಅವರಿಗಿಂತ ಮೇಲಿನ ಹಂತದ ಅಧಿಕಾರಿಗಳಿಗೆ ಮಾತ್ರ ಸೀಮಿತಗೊಳಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
ರಾಜ್ಯ ಸರ್ಕಾರವು ತಕ್ಷಣ ಈ ಅಧಿಕಾರವನ್ನು ಹಿಂಪಡೆಯಬೇಕು. ಈ ಕುರಿತು ಪತ್ರ ಬರೆದು ಚುನಾವಣಾ ಆಯೋಗದ ಗಮನಕ್ಕೂ ತರುವ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಜಿಪಂ, ತಾಪಂ ಚುನಾವಣೆ ಮುಂದೂಡಬಾರದು
ಮುಂಬರುವ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಮೀಸಲಾತಿ ವಿವರಗಳನ್ನು ಪ್ರಕಟಿಸಿದೆ. ಹೀಗಿರುವಾಗ ಬೇರೆ ಯಾವುದೇ ನೆಪವೊಡ್ಡಿ ಚುನಾವಣೆಗಳನ್ನು ಮುಂದೂಡುವ ಪ್ರಯತ್ನ ಮಾಡಬಾರದು ಎಂದು ಒತ್ತಾಯಿಸಿದರು.
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಉದ್ದೇಶದಿಂದ ಪ್ರತಿ ಜಿಲ್ಲೆಗೂ ಪ್ರಭಾರಿಗಳನ್ನು ನೇಮಕ ಮಾಡಲು ಹಾಗೂ ಪ್ರತಿಯೊಂದು ಜಿಲ್ಲೆಯಲ್ಲಿ ತಕ್ಷಣ ಚುನಾವಣಾ ನಿರ್ವಹಣಾ ಸಮಿತಿಗಳನ್ನು ರಚಿಸಲು ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ವಿಜಯೇಂದ್ರ ಹೇಳಿದರು.
ಮೀಸಲಾತಿ ಪಟ್ಟಿಯಲ್ಲಿ ಆಡಳಿತ ಪಕ್ಷಕ್ಕೆ ಅನುಕೂಲವಾಗುವ ರೀತಿಯಲ್ಲಿ ಬದಲಾವಣೆ ಮಾಡಿರುವುದರ ಜತೆಗೆ ಹಲವು ಗೊಂದಲಗಳನ್ನೂ ಸೃಷ್ಟಿಸಲಾಗಿದೆ. ಈ ಬೆಳವಣಿಗೆಗಳನ್ನು ಗಮನಿಸಿದರೆ ರಾಜ್ಯ ಸರ್ಕಾರಕ್ಕೆ ಚುನಾವಣೆ ನಡೆಸುವ ಇಚ್ಛಾಶಕ್ತಿ ಇದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್‌ನ ಆಂತರಿಕ ಕಚ್ಚಾಟದಿಂದ ಸ್ಟಿಂಗ್ ಆಪರೇಶನ್
ಆಡಳಿತ ಪಕ್ಷದ ಶಾಸಕರು ಮತ್ತು ಸಚಿವರು ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿಲುಕಿಕೊಂಡಿದ್ದಾರೆ. ಕಾಂಗ್ರೆಸ್‌ನ ಆಂತರಿಕ ಕಚ್ಚಾಟ ಮತ್ತು ಹಗ್ಗಜಗ್ಗಾಟದ ನಡುವೆ ಅವರವರೇ ಪರಸ್ಪರ ಸ್ಟಿಂಗ್ ಮಾಡಿಕೊಂಡಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ ಎಂದು ವಿಜಯೇಂದ್ರ ಹೇಳಿದರು.
ಈ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಬಿಜೆಪಿ ಮಾತನಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಪ್ರಕರಣದ ಸತ್ಯಾಸತ್ಯತೆ ಏನೆಂಬುದು ಹೊರಬರಲಿ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಕೆಪಿಎಸ್‌ಸಿ ಪ್ರಕರಣದ ಸಮರ್ಪಕ ತನಿಖೆಯಾಗಲಿ
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವಿಚಾರದಲ್ಲಿ ತನಿಖೆಗೆ ಆಗ್ರಹಿಸುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ರಾಜ್ಯದಲ್ಲಿ ಅವರದೇ ಸರ್ಕಾರವಿದೆ. ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಅವರೇ ಕೈಗೊಳ್ಳಲಿ ಎಂದರು.
ಕೆಪಿಎಸ್‌ಸಿ ವಿಚಾರದಲ್ಲಿ ಬಿಜೆಪಿ ಏಕೆ ಮಾತನಾಡುತ್ತಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿರುವುದನ್ನು ಗಮನಿಸಿದ್ದೇನೆ. ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆ ನಡೆದಾಗ ತಡೆಯಾಜ್ಞೆ ಪಡೆಯಲು ಉಚ್ಚತಮ ನ್ಯಾಯಾಲಯಕ್ಕೆ ಹೋದವರು ಯಾರು? ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯ ಸರ್ಕಾರಕ್ಕೆ ಆತಂಕವೇಕೆ ಎಂದು ಪ್ರಶ್ನಿಸಿದರು.
ಕೆಪಿಎಸ್‌ಸಿ ವಿಚಾರದಲ್ಲಿ ಬಿಜೆಪಿಗೆ ಯಾವುದೇ ತಕರಾರಿಲ್ಲ. ಪ್ರಕರಣದ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R