ಶಕ್ತಿ, ಗೃಹಲಕ್ಷ್ಮಿ ಯೋಜನೆಗಳಿಂದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು
ಗದಗ, 12 ಅಕ್ಟೋಬರ್ (ಹಿ.ಸ.) ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಲ್ಲ. ಅವು ತಳಸಮುದಾಯದ ಜನರ ಬದುಕಿನಲ್ಲಿ ಆರ್ಥಿಕ ಸ್ಥಿರತೆ ತರುವುದರ ಜೊತೆಗೆ ಮಹಿಳೆಯರನ್ನು ಸ್ವಾವಲಂಬನೆ ಮತ್ತು ಸ್ವಾಭಿಮಾನದ ಹಾದಿಯಲ್ಲಿ ಮುನ್ನಡೆಸುತ್ತಿವೆ ಎಂದು ಗದಗ ತಾಲೂಕು ಪಂಚ ಗ್ಯಾರಂಟಿ ಸ
ಫೋಟೋ


ಗದಗ, 12 ಅಕ್ಟೋಬರ್ (ಹಿ.ಸ.)

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಲ್ಲ. ಅವು ತಳಸಮುದಾಯದ ಜನರ ಬದುಕಿನಲ್ಲಿ ಆರ್ಥಿಕ ಸ್ಥಿರತೆ ತರುವುದರ ಜೊತೆಗೆ ಮಹಿಳೆಯರನ್ನು ಸ್ವಾವಲಂಬನೆ ಮತ್ತು ಸ್ವಾಭಿಮಾನದ ಹಾದಿಯಲ್ಲಿ ಮುನ್ನಡೆಸುತ್ತಿವೆ ಎಂದು ಗದಗ ತಾಲೂಕು ಪಂಚ ಗ್ಯಾರಂಟಿ ಸಮಿತಿ ಸದಸ್ಯೆ ಸಾವಿತ್ರಿ ಜಿ. ಹೂಗಾರ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳ ಆರ್ಥಿಕ ಮಹತ್ವ ಮತ್ತು ಸಮಾಜದ ಮೇಲಾಗುತ್ತಿರುವ ಪರಿಣಾಮಗಳನ್ನು ವಿವರಿಸಿದ್ದಾರೆ. ರಾಜ್ಯದ ಸಂಪನ್ಮೂಲ, ಆರ್ಥಿಕ ಪರಿಸ್ಥಿತಿ ಹಾಗೂ ಜನರ ಅಗತ್ಯಗಳನ್ನು ಪರಿಗಣಿಸಿ, ಆರ್ಥಿಕ ತಜ್ಞರ ಸಲಹೆ ಮತ್ತು ಸುದೀರ್ಘ ಅಧ್ಯಯನದ ಬಳಿಕ ಸರ್ಕಾರ ಈ ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳ ಮಹತ್ವವನ್ನು ಯಾರೂ ಹಗುರವಾಗಿ ಪರಿಗಣಿಸಬಾರದು ಎಂದು ತಿಳಿಸಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಶಕ್ತಿ ಯೋಜನೆ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ದಾರಿಯಾಗಿದೆ. ಗ್ರಾಮೀಣ ಮತ್ತು ಅರೆನಗರ ಪ್ರದೇಶಗಳ ಮಹಿಳೆಯರಿಗೆ ಉದ್ಯೋಗ, ಶಿಕ್ಷಣ ಹಾಗೂ ವಿವಿಧ ಕೆಲಸಗಳಿಗಾಗಿ ಪ್ರಯಾಣಿಸಲು ಅನುಕೂಲವಾಗಿದೆ. ಪ್ರಯಾಣದ ವೆಚ್ಚ ಭರಿಸಲಾಗದೆ ಉದ್ಯೋಗಾವಕಾಶಗಳಿಂದ ದೂರ ಉಳಿಯುತ್ತಿದ್ದ ಮಹಿಳೆಯರಿಗೆ ಈ ಯೋಜನೆ ನೆರವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅದೇ ರೀತಿ, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿರುವುದರಿಂದ ಕುಟುಂಬದ ಆರ್ಥಿಕ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಹೆಚ್ಚಲು ಸಹಕಾರಿಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳು ಕುಟುಂಬಗಳ ಆರ್ಥಿಕ ಹೊರೆಯನ್ನು ತಗ್ಗಿಸುವುದರ ಜೊತೆಗೆ ಮಹಿಳೆಯರಲ್ಲಿ ಸ್ವಾವಲಂಬನೆಯ ಭರವಸೆ ಮೂಡಿಸುತ್ತಿವೆ ಎಂದು ಹೇಳಿದ್ದಾರೆ.

ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಮಹಿಳೆಯರ ಸಬಲೀಕರಣ ಅತ್ಯಗತ್ಯ. ಮಹಿಳೆಯರಿಗೆ ಆರ್ಥಿಕ ಶಕ್ತಿ ಮತ್ತು ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಗ್ಯಾರಂಟಿ ಯೋಜನೆಗಳು ಸಾಮಾಜಿಕ ನ್ಯಾಯದ ಆಶಯವನ್ನು ಸಾಕಾರಗೊಳಿಸಲು ನೆರವಾಗುತ್ತಿವೆ ಎಂದು ಸಾವಿತ್ರಿ ಜಿ. ಹೂಗಾರ ತಿಳಿಸಿದ್ದಾರೆ.

ಗ್ಯಾರಂಟಿಗಳು ಕೇವಲ ಉಚಿತ ಕೊಡುಗೆಗಳಲ್ಲ; ಮಹಿಳೆಯರ ಸ್ವಾಭಿಮಾನದ ಹಾದಿ

ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವಾಗುತ್ತಿವೆ. ವಿಶೇಷವಾಗಿ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಪ್ರಯಾಣದ ವೆಚ್ಚದ ಹೊರೆ ಕಡಿಮೆಯಾಗಿದ್ದು, ಉದ್ಯೋಗ ಮತ್ತು ಇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗಿದೆ. ಇಂತಹ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಉತ್ತೇಜನ ನೀಡುತ್ತಿವೆ ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande