
ವಿಜಯಪುರ, 12 ಅಕ್ಟೋಬರ್ (ಹಿ.ಸ.)
ವಿದ್ಯಾರ್ಥಿಗಳಿಗೆ ಸಂಸತ್ತಿನ ಕಾರ್ಯವೈಖರಿ ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಪರಿಚಯಿಸುವ ಉದ್ದೇಶದಿಂದ ಸಿಂದಗಿ ಪಟ್ಟಣದ ಮಾಂಗಲ್ಯ ಭವನದಲ್ಲಿ 2026-27ನೇ ಸಾಲಿನ ಸಿಂದಗಿ ಮತ್ತು ಅಲಮೇಲ ತಾಲೂಕು ಮಟ್ಟದ ಯುವ ಸಂಸತ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕ ಅಶೋಕ್ ಮನಗೂಳಿ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಶೋಕ್ ಮನಗೂಳಿ, ವಿದ್ಯಾರ್ಥಿ ಜೀವನದಲ್ಲಿಯೇ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಸಂಸದೀಯ ವ್ಯವಸ್ಥೆಯ ಕುರಿತು ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದೆ. ಯುವ ಸಂಸತ್ನಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಭವಿಷ್ಯದ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ಸಹಕಾರಿಯಾಗುತ್ತವೆ ಎಂದು ಹೇಳಿದರು.
ಯುವ ಸಂಸತ್ ಕಾರ್ಯಕ್ರಮದ ಪ್ರಮುಖ ಉದ್ದೇಶ ವಿದ್ಯಾರ್ಥಿಗಳಿಗೆ ಸಂಸತ್ ಭವನದ ಮಾದರಿಯನ್ನು ಪರಿಚಯಿಸುವುದರ ಜೊತೆಗೆ, ಸಂಸದೀಯ ಕಾರ್ಯವೈಖರಿಯ ಬಗ್ಗೆ ಪ್ರಾಯೋಗಿಕ ಅನುಭವ ಹಾಗೂ ಅರಿವು ಮೂಡಿಸುವುದಾಗಿದೆ. ವಿದ್ಯಾರ್ಥಿಗಳು ಸಂಸತ್ತಿನಲ್ಲಿ ನಡೆಯುವ ಚರ್ಚೆ, ಪ್ರಶ್ನೋತ್ತರ, ನಿರ್ಣಯ ಮಂಡನೆ ಹಾಗೂ ವಿವಿಧ ವಿಚಾರಗಳ ಕುರಿತು ಚರ್ಚಿಸುವ ವಿಧಾನಗಳನ್ನು ಮಾದರಿ ರೂಪದಲ್ಲಿ ತಿಳಿದುಕೊಳ್ಳಲು ಈ ಕಾರ್ಯಕ್ರಮ ವೇದಿಕೆಯಾಯಿತು.
ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು, ಸಂಸದೀಯ ವ್ಯವಸ್ಥೆ, ನಾಯಕತ್ವದ ಗುಣಗಳು ಹಾಗೂ ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆ ಬೆಳೆಸುವಲ್ಲಿ ಯುವ ಸಂಸತ್ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ಇಂತಹ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಪ್ರಜಾಪ್ರಭುತ್ವದ ನೈಜ ಪ್ರಕ್ರಿಯೆಗಳನ್ನು ಅರ್ಥಮಾಡಿಕೊಳ್ಳಲು ಅವಕಾಶ ದೊರೆಯುತ್ತದೆ.
ಯುವ ಸಂಸತ್ನಲ್ಲಿ ವಿದ್ಯಾರ್ಥಿಗಳು ವಿವಿಧ ಪಾತ್ರಗಳನ್ನು ನಿರ್ವಹಿಸುವ ಮೂಲಕ ಸಂಸದೀಯ ವ್ಯವಸ್ಥೆಯ ಕಾರ್ಯವೈಖರಿಯನ್ನು ಅನುಭವಿಸಿದರು. ತಮ್ಮ ಅಭಿಪ್ರಾಯಗಳನ್ನು ಸ್ಪಷ್ಟವಾಗಿ ಹಾಗೂ ಪರಿಣಾಮಕಾರಿಯಾಗಿ ಮಂಡಿಸುವುದು, ಇತರರ ಅಭಿಪ್ರಾಯಗಳನ್ನು ಆಲಿಸುವುದು, ವಿಷಯಾಧಾರಿತ ಚರ್ಚೆಯಲ್ಲಿ ಪಾಲ್ಗೊಳ್ಳುವುದು ಹಾಗೂ ಆರೋಗ್ಯಕರ ಸಂವಾದ ನಡೆಸುವ ಕೌಶಲಗಳನ್ನು ಬೆಳೆಸಿಕೊಳ್ಳಲು ಕಾರ್ಯಕ್ರಮ ನೆರವಾಯಿತು.
ಪ್ರಜಾಪ್ರಭುತ್ವ ವ್ಯವಸ್ಥೆಯ ಯಶಸ್ಸಿಗೆ ಜವಾಬ್ದಾರಿಯುತ ಹಾಗೂ ಜಾಗೃತ ನಾಗರಿಕರ ಪಾತ್ರ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಸಂವಿಧಾನದ ಮೌಲ್ಯಗಳು ಮತ್ತು ನಾಗರಿಕ ಕರ್ತವ್ಯಗಳ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ. ಯುವ ಸಂಸತ್ನಂತಹ ಶೈಕ್ಷಣಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದರ ಜೊತೆಗೆ, ಸಮಾಜ ಮತ್ತು ದೇಶದ ಅಭಿವೃದ್ಧಿಯಲ್ಲಿ ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಲು ಪ್ರೇರಣೆ ನೀಡುತ್ತವೆ.
ಸಿಂದಗಿ ಹಾಗೂ ಅಲಮೇಲ ತಾಲೂಕುಗಳ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಕಾರ್ಯಕ್ರಮವು ಗಮನ ಸೆಳೆಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande