ರಾಜ್ಯದಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ರದ್ದು: ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು, 12 ಅಕ್ಟೋಬರ್ (ಹಿ.ಸ.): ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಹೆಚ್ಚಿಸಲಾಗಿದ್ದ ಮೀಸಲಾತಿ ಪ್ರಮಾಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.
karnataka-high-court-quashes-sc-st-reservation-hike


ಬೆಂಗಳೂರು, 12 ಅಕ್ಟೋಬರ್ (ಹಿ.ಸ.):

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಹೆಚ್ಚಿಸಲಾಗಿದ್ದ ಮೀಸಲಾತಿ ಪ್ರಮಾಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿದ್ದ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಅಧಿನಿಯಮ-2022 ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಶೈಕ್ಷಣಿಕ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರಿ ಸೇವೆಗಳಲ್ಲಿ ಮೀಸಲಾತಿ ಹೆಚ್ಚಳವನ್ನು ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿತ್ರಾ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಶೇ.50ರಿಂದ 56ಕ್ಕೆ ಹೆಚ್ಚಿಸಿದ್ದ ಒಟ್ಟು ಮೀಸಲಾತಿ

ರಾಜ್ಯದಲ್ಲಿ ಈ ಹಿಂದೆ ಪರಿಶಿಷ್ಟ ಜಾತಿಯವರಿಗೆ ಶೇ.15 ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.3ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ನಂತರ ಎಸ್ಸಿ ಮೀಸಲಾತಿಯನ್ನು ಶೇ.17ಕ್ಕೆ ಮತ್ತು ಎಸ್ಟಿ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಲಾಗಿತ್ತು.

ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಒಟ್ಟಾಗಿ ನೀಡಲಾಗುತ್ತಿದ್ದ ಮೀಸಲಾತಿ ಶೇ.18ರಿಂದ ಶೇ.24ಕ್ಕೆ ಏರಿಕೆಯಾಗಿತ್ತು. ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣವೂ ಶೇ.50ರಿಂದ ಶೇ.56ಕ್ಕೆ ಹೆಚ್ಚಾಗಿತ್ತು. ಈ ಹೆಚ್ಚಳದ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ನಾಗಮೋಹನ್ ದಾಸ್ ಸಮಿತಿ ಶಿಫಾರಸಿನ ಹಿನ್ನೆಲೆ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಮತ್ತು ಮೀಸಲಾತಿ ಬೇಡಿಕೆಗಳ ಕುರಿತು ಅಧ್ಯಯನ ನಡೆಸಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ, ಎಸ್ಸಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಎಸ್ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಈ ವರದಿಯ ಕುರಿತು ನಡೆದ ಸರ್ವಪಕ್ಷ ಸಭೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ವಿವಿಧ ರಾಜಕೀಯ ಪಕ್ಷಗಳು ಒಪ್ಪಿಗೆ ಸೂಚಿಸಿದ್ದವು. ಬಳಿಕ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮೀಸಲಾತಿ ಹೆಚ್ಚಳದ ಪ್ರಕ್ರಿಯೆಗೆ ಚಾಲನೆ ನೀಡಿತ್ತು.

ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ಕಾಯ್ದೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಿಸುವ ಉದ್ದೇಶದಿಂದ ರೂಪಿಸಲಾಗಿದ್ದ ಕರಡು ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು.

ನಂತರ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು, ರಾಜ್ಯಪಾಲರು ಅದಕ್ಕೆ ಒಪ್ಪಿಗೆ ಸೂಚಿಸಿದ್ದರು. ಬಳಿಕ ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಅಧಿಕೃತ ರಾಜ್ಯಪತ್ರವನ್ನು ಪ್ರಕಟಿಸಲಾಗಿತ್ತು.

ಈ ಕ್ರಮದ ಮೂಲಕ ಪರಿಶಿಷ್ಟ ಜಾತಿಯ 103 ಉಪಜಾತಿಗಳು ಹಾಗೂ ಪರಿಶಿಷ್ಟ ಪಂಗಡದ 56 ಉಪಪಂಗಡಗಳಿಗೆ ಹೆಚ್ಚುವರಿ ಮೀಸಲಾತಿ ಸೌಲಭ್ಯ ಕಲ್ಪಿಸುವ ಉದ್ದೇಶ ಹೊಂದಲಾಗಿತ್ತು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande