ದಸರಾ ಸಂಭ್ರಮದ ನಡುವೆ ಸೆಮಿಸ್ಟರ್ ಪರೀಕ್ಷೆ: ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಮಂಗಳೂರು ದಸರಾ ರಜೆ ಅವಧಿಯಲ್ಲಿ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿದ ಸೈಂಟ್ ಆಗ್ನೆಸ್ ಕಾಲೇಜು ಆಡಳಿತದ ವಿರುದ್ಧ ವಿದ್ಯಾರ್ಥಿಗಳು ಹಾಗೂ ಎಬಿವಿಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಪ್ರತಿಭಟನೆ ನಡೆಸಿದ್ದು, ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿದ್ದಾರೆ.
mangalore-st-agnes-college-semester-exams-dasara-holiday-student-protest


ಮಂಗಳೂರು, 12 ಅಕ್ಟೋಬರ್ (ಹಿ.ಸ.):

ಮಂಗಳೂರು ದಸರಾ ಮಹೋತ್ಸವದ ಸಂಭ್ರಮದ ನಡುವೆಯೇ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿರುವ ಮಂಗಳೂರಿನ ಬೆಂದೂರ್ವೆಲ್ ಬಳಿಯ ಸೈಂಟ್ ಆಗ್ನೆಸ್ ಕಾಲೇಜಿನ ಆಡಳಿತ ಮಂಡಳಿಯ ಕ್ರಮಕ್ಕೆ ವಿದ್ಯಾರ್ಥಿಗಳು ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಲೇಜಿನಲ್ಲಿ ಅ.12ರಿಂದ ಅ.28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ.

ದಸರಾ ರಜೆ ನೀಡದೆ ಪರೀಕ್ಷೆ ನಡೆಸಲು ಮುಂದಾಗಿರುವ ಕಾಲೇಜು ಆಡಳಿತದ ನಿರ್ಧಾರವನ್ನು ವಿರೋಧಿಸಿ ನೂರಾರು ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಎಬಿವಿಪಿ ಸಂಘಟನೆಯೂ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡಿದೆ.

ಮಂಗಳೂರು ದಸರಾ ರಾಜ್ಯದಲ್ಲೇ ಪ್ರಸಿದ್ಧವಾಗಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕುಟುಂಬದೊಂದಿಗೆ ಹಬ್ಬದ ಆಚರಣೆ ಹಾಗೂ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ಷೇಪಿಸಿದ್ದಾರೆ.

ಹಬ್ಬದ ದಿನಗಳಲ್ಲಿ ಪರೀಕ್ಷೆ ಆಯೋಜಿಸಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆಗಳನ್ನು ಮುಂದೂಡುವಂತೆ ಕಾಲೇಜು ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದ್ದರೂ, ಅದಕ್ಕೆ ಸ್ಪಂದಿಸದೆ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸದೆ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿಗೆ ದೂರುಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿ ವಿದ್ಯಾರ್ಥಿ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೂ ದೂರು ಸಲ್ಲಿಸಿವೆ. ಆದರೂ ಪರೀಕ್ಷೆ ಆಯೋಜನೆ ವಿಚಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿದ್ದಾರೆ.

ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ನಿರ್ಧಾರವನ್ನು ಮರುಪರಿಶೀಲಿಸಿ, ಪರೀಕ್ಷೆಗಳನ್ನು ಮುಂದೂಡಬೇಕು ಎಂಬುದು ಪ್ರತಿಭಟನಾನಿರತ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾಗಿದೆ.

ಸದ್ಯ ಸೈಂಟ್ ಆಗ್ನೆಸ್ ಕಾಲೇಜಿನ ಗೇಟ್ ಎದುರು ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದ್ದು, ಕಾಲೇಜು ಆಡಳಿತ ಮಂಡಳಿಯ ಮುಂದಿನ ನಡೆ ಕುತೂಹಲ ಮೂಡಿಸಿದೆ.

--------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande