
ಬೆಂಗಳೂರು, 13 ಅಕ್ಟೋಬರ್ (ಹಿ.ಸ.):
ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನಿಗದಿಪಡಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಮಂಗಳವಾರ ರಾಜ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟಕ್ಕೆ ಕರೆ ನೀಡಿವೆ.
ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪೊಲೀಸರು ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-48 ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದ ಮಾರ್ಗ ಬದಲಾವಣೆ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್, ಹಿರೇಬಾಗೇವಾಡಿ ಹಾಗೂ ಕೊಗನೊಳ್ಳಿ ಟೋಲ್ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿದ್ಧತೆ ಮಾಡಿಕೊಂಡಿದ್ದಾರೆ. ವಿಜಯಪುರ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿಯೂ ರೈತ ಸಂಘಟನೆಗಳು ಹೆದ್ದಾರಿ ತಡೆದು ಧರಣಿ ನಡೆಸಿದ್ದಾರೆ .
ವಾಹನಗಳಿಗೆ ಪರ್ಯಾಯ ಮಾರ್ಗ ಸೂಚನೆ:
ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಧಾರವಾಡದಿಂದ ಬೆಳಗಾವಿ ಮೂಲಕ ಮಹಾರಾಷ್ಟ್ರಕ್ಕೆ ತೆರಳುವ ವಾಹನಗಳು ಅಳ್ನಾವರ–ಖಾನಾಪುರ ಮಾರ್ಗವಾಗಿ ಸಂಚರಿಸುವಂತೆ ಸೂಚಿಸಲಾಗಿದೆ.
ಧಾರವಾಡದಿಂದ ಗೋಕಾಕಕ್ಕೆ ತೆರಳುವ ವಾಹನಗಳು ಬೆಳವಡಿ–ಬೈಲಹೊಂಗಲ ಮಾರ್ಗ ಬಳಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಬರುವ ವಾಹನಗಳು ಕಾಗಲ್–ನಿಪ್ಪಾಣಿ–ಚಿಕ್ಕೋಡಿ–ಗೋಕಾಕ–ಸವದತ್ತಿ ಮಾರ್ಗವಾಗಿ ಧಾರವಾಡ ತಲುಪುವಂತೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
ಪ್ರತಿಭಟನೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಭಾರೀ ಮತ್ತು ಲಘು ವಾಹನಗಳಿಗೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.
ಹತ್ತರಗಿ, ಹಿರೇಬಾಗೇವಾಡಿ, ಕೊಗನೊಳ್ಳಿಯಲ್ಲಿ ಪ್ರತಿಭಟನೆಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಹೆದ್ದಾರಿ ತಡೆ ಹೋರಾಟ ನಡೆದಿದೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ರೈತ ಮುಖಂಡ ಪ್ರಕಾಶ ನಾಯಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು. ಚಿಕ್ಕೋಡಿ ತಾಲೂಕಿನ ಕೊಗನೊಳ್ಳಿ ಟೋಲ್ ಬಳಿ ಕರ್ನಾಟಕದ ರೈತರೊಂದಿಗೆ ಮಹಾರಾಷ್ಟ್ರದ ರೈತರೂ ಧರಣಿ ನಡೆಸಿದ್ದಾರೆ .
ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಬೇಡಿಕೆ ಕುರಿತು ಕರ್ನಾಟಕದ ರೈತರ ನಿಯೋಗ ಸೋಮವಾರ ದೆಹಲಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ಸಭೆ ನಡೆಸಿತ್ತು.
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ರಾಜ್ಯದ ಸಹಕಾರ ಸಚಿವ ಲಕ್ಷ್ಮಣ ಸವದಿ ಭಾಗವಹಿಸಿದ್ದರು.
ಆದರೆ, ರೈತರ ಬೇಡಿಕೆ ಈಡೇರಿಸುವ ವಿಚಾರದಲ್ಲಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹೆದ್ದಾರಿ ತಡೆ ಹೋರಾಟಕ್ಕೆ ಕರೆ ನೀಡಲಾಗಿದೆ.
ಕೇಂದ್ರ ಸರ್ಕಾರ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರು ಒಗ್ಗಟ್ಟಿನಿಂದ ಹೋರಾಟ ನಡೆಸಲಿದ್ದಾರೆ. ಕಬ್ಬು ಬೆಳೆಗಾರರ ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದಲ್ಲಿಯೂ ಕಬ್ಬು ಬೆಳೆಗಾರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಯಚೂರು–ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.ಕೊಪ್ಪಳದಲ್ಲೂ ಟೋಲ್ ಬಂದ್ಗೆ ಸಿದ್ಧತೆಕೊಪ್ಪಳ ತಾಲೂಕಿನ ಹಿಟ್ನಾಳ್ ಬಳಿಯ ಟೋಲ್ ಗೇಟ್ನಲ್ಲಿ ಪ್ರತಿಭಟನೆ ನಡೆಸಿ ಟೋಲ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಕಬ್ಬಿಗೆ ಎಂಎಸ್ಪಿ ನಿಗದಿಪಡಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಇಲ್ಲಿಯೂ ಪೊಲೀಸರು ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.
ರೈತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಹೀಗಾಗಿ ರೈತರು ಪ್ರತಿಭಟನೆಯ ಹಾದಿ ಹಿಡಿಯಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಹೆದ್ದಾರಿ ತಡೆ ಹೋರಾಟದಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದ್ದು, ಪ್ರಯಾಣಿಕರು ಸಂಚಾರ ಪೊಲೀಸರ ಸೂಚನೆಗಳನ್ನು ಪಾಲಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.
--------------
ಹಿಂದೂಸ್ತಾನ್ ಸಮಾಚಾರ್ / BHARGAVI G R