
ಮೈಸೂರು, 13 ಅಕ್ಟೋಬರ್ (ಹಿ.ಸ.):
ನಗರದ ಪ್ರತಿಯೊಂದು ಮನೆಗೂ ನಲ್ಲಿಯ ಮೂಲಕ ನೇರವಾಗಿ ಶುದ್ಧ ಕುಡಿಯುವ ನೀರು ಪೂರೈಸುವ ‘ಮನೆಮನೆಗೆ ಶುದ್ಧ ಜಲ’ ಅಭಿಯಾನವನ್ನು ಮೈಸೂರಿನಲ್ಲಿ ಮುಂದಿನ ಒಂದು ವರ್ಷದೊಳಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.
ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಡಾ. ದೇವರಾಜ ಅರಸು ಸಭಾಂಗಣದಲ್ಲಿ ಕುಡಿಯುವ ನೀರು, ಘನತ್ಯಾಜ್ಯ ನಿರ್ವಹಣೆ ಹಾಗೂ ನಗರಾಭಿವೃದ್ಧಿಗೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಸಮಾಲೋಚನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಪ್ರತಿಯೊಂದು ಮನೆಗೂ ನಲ್ಲಿಯ ಮೂಲಕವೇ ನೇರವಾಗಿ ಕುಡಿಯಲು ಯೋಗ್ಯವಾದ ಶುದ್ಧ ನೀರು ಪೂರೈಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಇದರಿಂದ ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ನಗರವಾಸಿಗಳ ಜೀವನಮಟ್ಟ ಸುಧಾರಣೆಗೆ ನೆರವಾಗಲಿದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು.
ಹಲವು ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಈ ಮಾದರಿಯನ್ನು ಅಳವಡಿಸಿಕೊಳ್ಳಲಾಗಿದ್ದು, ಒಡಿಶಾದ ಪುರಿ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿಯೂ ಅನುಷ್ಠಾನಗೊಳಿಸಲಾಗಿದೆ.
ಮೈಸೂರಿನಲ್ಲಿ ಪ್ರಾಯೋಗಿಕವಾಗಿ ಯೋಜನೆಯನ್ನು ಜಾರಿಗೊಳಿಸಿ, ಅದರ ಸಾಧಕ-ಬಾಧಕಗಳನ್ನು ಪರಿಶೀಲಿಸಿದ ಬಳಿಕ ರಾಜ್ಯದ ಇತರ ನಗರಗಳಿಗೂ ವಿಸ್ತರಿಸುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಯಿತು.
ಇದೇ ವೇಳೆ ಕೊಳಗೇರಿ ಪ್ರದೇಶಗಳ ಸಮಗ್ರ ಪರಿವರ್ತನೆ, ತಂತ್ರಜ್ಞಾನ ಆಧಾರಿತ ಯೋಜನೆಗಳ ಅನುಷ್ಠಾನ, ಸಾಮಾಜಿಕ ಮೂಲಸೌಕರ್ಯಗಳ ಬಲವರ್ಧನೆ, ಮೂಲಭೂತ ನಾಗರಿಕ ಸೌಲಭ್ಯಗಳ ಸುಧಾರಣೆ ಹಾಗೂ ಸುಸ್ಥಿರ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸುವ ಕುರಿತು ಚರ್ಚಿಸಲಾಯಿತು.
ಒಡಿಶಾ ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ.ಜಿ. ಮತಿ ವಾತನನ್ ಅವರು ಸಭೆಯಲ್ಲಿ ಭಾಗವಹಿಸಿ, ತಮ್ಮ ಆಡಳಿತಾತ್ಮಕ ಅನುಭವದ ಆಧಾರದ ಮೇಲೆ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.
ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ. ಕಾವೇರಿ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಿರ್ದೇಶಕರು ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
“ಶುದ್ಧ ಕುಡಿಯುವ ನೀರು, ಸುಸ್ಥಿರ ನಗರಾಭಿವೃದ್ಧಿ ಹಾಗೂ ಉತ್ತಮ ಜೀವನಮಟ್ಟದತ್ತ ನಮ್ಮ ಸಂಕಲ್ಪ. ಮೈಸೂರಿನಲ್ಲಿ ‘ಮನೆಮನೆಗೆ ಶುದ್ಧ ಜಲ’ ಅಭಿಯಾನವನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಿ, ಅದರ ಅನುಭವದ ಆಧಾರದ ಮೇಲೆ ರಾಜ್ಯದ ಇತರ ನಗರಗಳಿಗೂ ವಿಸ್ತರಿಸುವ ಗುರಿ ಹೊಂದಲಾಗಿದೆ” ಎಂದು ಸಭೆಯ ನಂತರ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಮಾಧ್ಯಮಗಳಿಗೆ ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R