
ಬೆಂಗಳೂರು, 13 ಅಕ್ಟೋಬರ್ (ಹಿ.ಸ.):
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ತಮ್ಮ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಡಿಯೋವನ್ನು ಪ್ರಕಟಿಸದಂತೆ ಹಾಗೂ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಕಳೆದ ಕೆಲವು ದಿನಗಳಿಂದ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ತಮ್ಮ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಸಲಾಗುತ್ತಿದೆ. ಇದು ರಾಜಕೀಯ ದುರುದ್ದೇಶದಿಂದ ತಮ್ಮ ಚಾರಿತ್ರ್ಯಹನನ ಮಾಡಲು ನಡೆಸುತ್ತಿರುವ ಪ್ರಯತ್ನದಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಸ್ಟಿಂಗ್ ಆಪರೇಷನ್ ವಿಡಿಯೋಗೂ ತಮಗೂ ಯಾವುದೇ ಸಂಬಂಧವಿಲ್ಲ. ಆದರೂ ಕೆಲವರು ಈ ವಿಡಿಯೋವನ್ನು ಬಳಸಿಕೊಂಡು ತಮ್ಮ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಹೆಸರಿನ ಉಲ್ಲೇಖವಿರುವ ವಿಡಿಯೋವನ್ನು ಯಾವುದೇ ಪತ್ರಿಕೆ, ದೂರದರ್ಶನ ವಾಹಿನಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸದಂತೆ ಹಾಗೂ ಪ್ರಸಾರ ಮಾಡದಂತೆ ತಡೆ ನೀಡಬೇಕೆಂದು ಕೋರಿ ನ್ಯಾಯಾಲಯದ ಮೊರೆ ಹೋಗಿರುವುದಾಗಿ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ತಾವು ಸಂಪೂರ್ಣ ನಿರಪರಾಧಿ ಎಂಬುದು ತಮ್ಮ ಆತ್ಮಸಾಕ್ಷಿಗೆ ತಿಳಿದಿದೆ. ತೆರೆದ ಪುಸ್ತಕದಂತಿರುವ ತಮ್ಮ ಐದು ದಶಕಗಳ ರಾಜಕೀಯ ಜೀವನವನ್ನು ಅರಿತಿರುವ ರಾಜ್ಯದ ಜನರಿಗೂ ಇದು ತಿಳಿದಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುಳ್ಳನ್ನು ಸತ್ಯವೆಂದು ಬಿಂಬಿಸುವುದು ಸುಲಭವಾಗಿದೆ. ಹೀಗಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ನ್ಯಾಯಾಲಯದ ಮೊರೆ ಹೋಗಿದ್ದೇನೆ. ಇದನ್ನು ಹೊರತುಪಡಿಸಿ ತಮಗೆ ಯಾವುದೇ ಭಯವಿಲ್ಲ. ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂಬ ನಂಬಿಕೆಯಿದೆ ಎಂದು ತಿಳಿಸಿದ್ದಾರೆ.
ತಾವು ಸಂಪೂರ್ಣವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿದ್ದು, ತಮ್ಮ ರಾಜಕೀಯ ಜೀವನದಲ್ಲಿ ಎಂದಿಗೂ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಿಲ್ಲ. ಆದರೆ ಕೆಲವು ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ನ್ಯಾಯಾಲಯದ ಮೂಲಕ ಪ್ರಕಟಣೆ ಮತ್ತು ಪ್ರಸಾರಕ್ಕೆ ತಡೆಯಾಜ್ಞೆ ಕೋರುವ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ವಿಷಾದವಿದೆ ಎಂದು ಹೇಳಿದ್ದಾರೆ.
ಸ್ಟಿಂಗ್ ಆಪರೇಷನ್ ವಿಡಿಯೋ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೂ ಈಗಾಗಲೇ ದೂರು ನೀಡಿದ್ದೇನೆ. ತನಿಖೆಯಿಂದ ಸತ್ಯ ಹೊರಬರಲಿದೆ ಎಂಬ ವಿಶ್ವಾಸವಿದೆ. ಅಲ್ಲಿಯವರೆಗೆ ಮಾಧ್ಯಮಗಳು ಮಾತ್ರವಲ್ಲದೆ ಸಾರ್ವಜನಿಕರೂ ಇಂತಹ ಸುದ್ದಿಗಳನ್ನು ಅನಗತ್ಯವಾಗಿ ಪ್ರಚಾರ ಮಾಡದೆ ಸತ್ಯದ ಪರವಾಗಿ ನಿಲ್ಲಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.