
ಕೋಲಾರ, 14 ಅಕ್ಟೋಬರ್ (ಹಿ.ಸ): ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ-ಜೆಡಿಎಸ್ (ಎನ್ಡಿಎ) ಮೈತ್ರಿಕೂಟದ ಜಿಲ್ಲಾಮಟ್ಟದ ಚುನಾವಣಾ ಪ್ರಚಾರ ಸಭೆಯನ್ನು ಗುರುವಾರ, ಅಕ್ಟೋಬರ್ ೧೫ರಂದು ಬೆಳಗ್ಗೆ ೧೦ ಗಂಟೆಗೆ ಕೋಲಾರ-ಬೆಂಗಳೂರು ರಸ್ತೆಯ ಕೊಂಡರಾಜನಹಳ್ಳಿ ಗೇಟ್ ಬಳಿಯ ನಾರಾಯಣಿ ಕನ್ವೆನ್ಷನ್ ಹಾಲ್ನಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ, ಎನ್ಡಿಎ ಬೆಂಬಲಿತ ಅಭ್ಯರ್ಥಿ ಕೆ.ಎಂ. ಸುರೇಶ್, ಕೋಲಾರ ಸಂಸದ ಮಲ್ಲೇಶ್ ಬಾಬು, ಶಾಸಕರಾದ ಜಿ.ಕೆ. ವೆಂಕಟಶಿವಾರೆಡ್ಡಿ ಹಾಗೂ ಸಮೃದ್ಧಿ ಮಂಜುನಾಥ್ ಸೇರಿದಂತೆ ಮೈತ್ರಿಕೂಟದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ಮಾಜಿ ಸಂಸದ ಎಸ್. ಮುನಿಸ್ವಾಮಿ, ಮಾಜಿ ಶಾಸಕರಾದ ಬಿ.ಪಿ. ವೆಂಕಟಮುನಿಯಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಇಂಚರ ಗೋವಿಂದರಾಜು, ತೂಪಲ್ಲಿ ಚೌಡರೆಡ್ಡಿ, ವೈ.ಎ. ನಾರಾಯಣಸ್ವಾಮಿ, ಮಾಜಿ ಸಚಿವ ವರ್ತೂರು ಪ್ರಕಾಶ್, ಸಿಎಂಆರ್ ಶ್ರೀನಾಥ್, ಮಾಲೂರು ಮಂಜುನಾಥ್ ಗೌಡ, ಓಂ ಶಕ್ತಿ ಚಲಪತಿ, ಹೂಡಿ ವಿಜಯಕುಮಾರ್, ವೈ. ಸಂಪ0ಗಿ, ಮಾಲೂರು ರಾಮೇಗೌಡ, ಬಣಕನಹಳ್ಳಿ ನಟರಾಜು ಹಾಗೂ ಕೋಲಾರ ತಾಲೂಕು ಜೆಡಿಎಸ್ ಅಧ್ಯಕ್ಷ ಬಾಬು ಮೌನಿ ಸೇರಿದಂತೆ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಸಭೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರದ ಕಾರ್ಯತಂತ್ರ, ಮತದಾರರನ್ನು ತಲುಪುವ ವಿಧಾನ ಹಾಗೂ ಪಕ್ಷದ ಸಂಘಟನೆಯನ್ನು ಬಲಪಡಿಸುವ ಕುರಿತು ಚರ್ಚೆ ನಡೆಯಲಿದೆ. ಎರಡೂ ಪಕ್ಷಗಳ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು, ಬೂತ್ ಏಜೆಂಟರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಆಗ್ನೇಯ ಪದವೀಧರ ಕ್ಷೇತ್ರದ ಮತದಾರರು ಸೇರಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ನಿಗದಿತ ಸಮಯಕ್ಕೆ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕೋಲಾರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಿ.ಕೆ. ವೆಂಕಟಶಿವಾರೆಡ್ಡಿ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್