ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟ ತೀವ್ರ:ಐ.ಎಂ.ತೊರಗಲ್ಲ
ಹುಬ್ಬಳ್ಳಿ, 14 ಅಕ್ಟೋಬರ್ (ಹಿ.ಸ.): ಕಬ್ಬಿಗೆ ಪ್ರತಿ ಟನ್‌ಗೆ 5,500 ದರ ನಿಗದಿಪಡಿಸುವುದು, ಸ್ವಾಮಿನಾಥನ್ ವರದಿ ಜಾರಿಗೊಳಿಸುವುದು ಸೇರಿದಂತೆ ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಪರಿಸ್ಥಿತಿ ಕೈಮೀರುವ ಮುನ್ನ ಕೇಂದ್ರ ಸಚಿವ ಪ್ರಲ್ಹಾದ್
ಐ.ಎಂ.ತೊರಗಲ್ಲ


ಹುಬ್ಬಳ್ಳಿ, 14 ಅಕ್ಟೋಬರ್ (ಹಿ.ಸ.):

ಕಬ್ಬಿಗೆ ಪ್ರತಿ ಟನ್‌ಗೆ 5,500 ದರ ನಿಗದಿಪಡಿಸುವುದು, ಸ್ವಾಮಿನಾಥನ್ ವರದಿ ಜಾರಿಗೊಳಿಸುವುದು ಸೇರಿದಂತೆ ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ. ಪರಿಸ್ಥಿತಿ ಕೈಮೀರುವ ಮುನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ರೈತ ಸಂಘಟನೆ ಹಿರಿಯ ಮುಖಂಡ ಐ.ಎಂ. ತೊರಗಲ್ ಎಚ್ಚರಿಕೆ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಉನ್ನತ ಸ್ಥಾನದಲ್ಲಿದ್ದು, ಆಹಾರ ಸಚಿವರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರ ಸಂಕಷ್ಟಗಳಿಗೆ ಸ್ಪಂದಿಸಿ, ಅವರ ಪರವಾಗಿ ನಿಲ್ಲುವ ಜವಾಬ್ದಾರಿ ಅವರ ಮೇಲಿದೆ. ರೈತರು ಈ ಹಿಂದೆ ಹುಬ್ಬಳ್ಳಿಗೆ ಆಗಮಿಸಿ ಹೋರಾಟ ನಡೆಸಿದಾಗ ಕೆಲವು ಭರವಸೆಗಳನ್ನು ನೀಡಲಾಗಿತ್ತು. ಆ ಭರವಸೆಗಳ ಮೇಲೆ ವಿಶ್ವಾಸವಿಟ್ಟು ರೈತರು ಪ್ರತಿಭಟನೆಯನ್ನು ಹಿಂಪಡೆದಿದ್ದರು. ಆದರೆ, ದೆಹಲಿಯಲ್ಲಿ ನಡೆದ ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯದಿರುವುದರಿಂದ ಹೋರಾಟ ಮತ್ತೆ ತೀವ್ರಗೊಂಡಿದೆ ಎಂದು ಹೇಳಿದರು.

ರೈತರು ರಾಜ್ಯದ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ದಿನನಿತ್ಯದ ಅಗತ್ಯ ವಸ್ತುಗಳ ಸಾಗಾಟಕ್ಕೂ ಕೆಲವೆಡೆ ಅಡಚಣೆ ಉಂಟಾಗುತ್ತಿದೆ. ಈ ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಜನಸಾಮಾನ್ಯರು ಮತ್ತಷ್ಟು ಸಂಕಷ್ಟ ಎದುರಿಸಬೇಕಾಗುತ್ತದೆ. ಆದ್ದರಿಂದ ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸದೆ, ತಕ್ಷಣ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಕಬ್ಬು ಬೆಳೆಗಾರರು ಸೇರಿದಂತೆ ರೈತರು ತಮ್ಮ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯಬೇಕು ಎಂಬ ನ್ಯಾಯಯುತ ಬೇಡಿಕೆಯೊಂದಿಗೆ ಹೋರಾಟ ನಡೆಸುತ್ತಿದ್ದಾರೆ. ರೈತರ ಸಮಸ್ಯೆಗಳು ಉಲ್ಬಣಗೊಂಡು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮುನ್ನ ಕೇಂದ್ರ ಸಚಿವರು ಮಧ್ಯಪ್ರವೇಶಿಸಿ, ರೈತರ ವಿಶ್ವಾಸ ಗಳಿಸುವ ಕೆಲಸ ಮಾಡಬೇಕು. ಕೇವಲ ಭರವಸೆ ನೀಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ; ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಅಗತ್ಯವಿದೆ ಎಂದು ಒತ್ತಾಯಿಸಿದರು.

ರಾಜ್ಯದ ಸಚಿವರು ಹಾಗೂ ವಿಶೇಷವಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ರೈತರ ಸಂಕಷ್ಟವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತೊರಗಲ್ ಆಗ್ರಹಿಸಿದರು.

ದೇಶದ ಬೆನ್ನೆಲುಬು ಎಂದು ಕರೆಯಲ್ಪಡುವ ರೈತ ಇಂದು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾನೆ. ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರೈತನ ಬದುಕು ದುರ್ಬಲವಾಗುತ್ತಿರುವ ಸಂದರ್ಭದಲ್ಲಿ ಸರ್ಕಾರಗಳು ಮೌನವಾಗಿರದೆ, ಅವರ ನೆರವಿಗೆ ಧಾವಿಸಬೇಕು. ಕಬ್ಬಿಗೆ 5,500 ದರ ನಿಗದಿ, ಸ್ವಾಮಿನಾಥನ್ ವರದಿ ಜಾರಿ ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳನ್ನು ಆದಷ್ಟು ಬೇಗ ಈಡೇರಿಸಬೇಕು. ಇಲ್ಲವಾದರೆ ರೈತರ ಆಕ್ರೋಶ ಮತ್ತಷ್ಟು ಹೆಚ್ಚಾಗಲಿದ್ದು, ಹುಬ್ಬಳ್ಳಿಯಲ್ಲಿಯೂ ರಸ್ತೆ ತಡೆ ಹೋರಾಟಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಐ.ಎಂ. ತೊರಗಲ್ ಎಚ್ಚರಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande