
ಬೆಂಗಳೂರು, 14 ಅಕ್ಟೋಬರ್ (ಹಿ.ಸ.):
ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಆದರೆ, ಅಕ್ಟೋಬರ್ 15ರಂದು ಹವಾಮಾನದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಆರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಆರು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಹವಾಮಾನ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 15ರಂದು ತುಮಕೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಮೈಸೂರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇದೇ ವೇಳೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು ಎಂದು ಮುನ್ಸೂಚನೆ ತಿಳಿಸಿದೆ.
ಕರಾವಳಿ, ಉತ್ತರ ಒಳನಾಡಿನಲ್ಲೂ ಮಳೆ ಸಾಧ್ಯತೆ
ಅಕ್ಟೋಬರ್ 15ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.
ಆದರೆ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ಬೆಂಗಳೂರಿನಲ್ಲಿ ಸದ್ಯ ಒಣಹವೆ
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದರೂ, ಮುಂದಿನ ದಿನ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.
ಮಳೆ ಪ್ರಮಾಣದಲ್ಲಿ ಇಳಿಕೆ
ನೈಋತ್ಯ ಮುಂಗಾರು ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದೆ. ಮಂಗಳವಾರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಮಳೆಯಾದ ವರದಿ ಲಭ್ಯವಾಗಿಲ್ಲ ಎಂದು ನೀಡಿರುವ ಹವಾಮಾನ ಮಾಹಿತಿಯಲ್ಲಿ ತಿಳಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R