
ಬೆಂಗಳೂರು, 14 ಅಕ್ಟೋಬರ್ (ಹಿ.ಸ.):
ಕಬ್ಬಿಗೆ ಪ್ರತಿ ಟನ್ಗೆ ಕನಿಷ್ಠ 5,500 ರೂ. ಬೆಲೆ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಕಬ್ಬು ಬೆಳೆಗಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಹೋರಾಟ ತೀವ್ರಗೊಳಿಸಿದ್ದಾರೆ. ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಿ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರು, ತಮ್ಮ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಒತ್ತಾಯಿಸಿದ್ದಾರೆ.
ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಹೆಚ್ಚಳ, ರಾಜ್ಯದಲ್ಲಿ ಉತ್ಪಾದನೆಯಾಗುವ ಸಂಪೂರ್ಣ ಎಥೆನಾಲ್ ಖರೀದಿ ಹಾಗೂ ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಜಾರಿಯೂ ರೈತರ ಪ್ರಮುಖ ಬೇಡಿಕೆಗಳಾಗಿವೆ.
ಬೆಳಗಾವಿ ಜಿಲ್ಲೆಯ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹತ್ತರಗಿ, ಕುಗನೊಳ್ಳಿ ಮತ್ತು ಹಿರೇಬಾಗೇವಾಡಿ ಟೋಲ್ಗೇಟ್ಗಳ ಬಳಿ ಸಾವಿರಾರು ರೈತರು ಹೆದ್ದಾರಿಯಲ್ಲೇ ಮಲಗಿ ಅಹೋರಾತ್ರಿ ಧರಣಿ ನಡೆಸಿದ್ದಾರೆ.
ಹಿರೇಬಾಗೇವಾಡಿ ಬಳಿ ನೂರಾರು ಸರಕು ಸಾಗಣೆ ಟ್ರಕ್ಗಳು ಮತ್ತು ಖಾಸಗಿ ವಾಹನಗಳು ಕಿಲೋಮೀಟರ್ಗಟ್ಟಲೆ ಸಾಲುಗಟ್ಟಿ ನಿಂತಿವೆ. ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ಸಂಚರಿಸಲು ಯತ್ನಿಸಿದ ಗುಜರಾತ್ ಟ್ರಾವೆಲ್ಸ್ ಬಸ್ ಸೇರಿದಂತೆ ಹಲವು ವಾಹನಗಳನ್ನು ಪ್ರತಿಭಟನಾಕಾರರು ತಡೆದು ವಾಪಸ್ ಕಳುಹಿಸಿದ್ದಾರೆ.
ಧಾರವಾಡ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ರೈತರು ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಧರಣಿ ನಡೆಸಿದ್ದಾರೆ. ಸತತ 11 ಗಂಟೆಗಳಿಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು, ಹಾಗೂ ಸರಕು ಸಾಗಣೆ ವಾಹನಗಳ ಚಾಲಕರು ರಸ್ತೆಯಲ್ಲೇ ಸಿಲುಕಿ ತೀವ್ರ ತೊಂದರೆ ಅನುಭವಿಸಿದ್ದಾರೆ.
ಕಬ್ಬು ಬೆಳೆಗಾರರು ಪ್ರತಿ ಟನ್ಗೆ ಕನಿಷ್ಠ 5,500 ರೂ. ಬೆಲೆ ನಿಗದಿಪಡಿಸಬೇಕು, ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಹೆಚ್ಚಿಸಬೇಕು, ರಾಜ್ಯದಲ್ಲಿ ಉತ್ಪಾದನೆಯಾಗುವ ಸಂಪೂರ್ಣ ಎಥೆನಾಲ್ ಅನ್ನು ಕೇಂದ್ರ ಸರ್ಕಾರ ಖರೀದಿಸಬೇಕು ಹಾಗೂ ಸ್ವಾಮಿನಾಥನ್ ಆಯೋಗದ ವರದಿ ಮತ್ತು ಶಿಫಾರಸುಗಳನ್ನು ಸಂಪೂರ್ಣವಾಗಿ ಜಾರಿಗೊಳಿಸಬೇಕು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಚುನ್ನಪ್ಪ ಪೂಜಾರಿ ಆಗ್ರಹಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣ ಮಧ್ಯಪ್ರವೇಶಿಸಿ ಕಬ್ಬಿಗೆ ಸೂಕ್ತ ಬೆಲೆ ಘೋಷಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿ ರಾಜ್ಯವ್ಯಾಪಿ ಬಂದ್ಗೆ ಕರೆ ನೀಡುವುದಾಗಿ ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.