ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
ಅ.16ರಂದು ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಆರು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಸಾಧ್ಯತೆ
Karnataka Weather Alert: Heavy Rain Forecast in Bengaluru and South Interior Districts


ಬೆಂಗಳೂರು, 15 ಅಕ್ಟೋಬರ್ (ಹಿ.ಸ.):

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಶೇಷವಾಗಿ ಅಕ್ಟೋಬರ್ 16ರಂದು ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗುವ ನಿರೀಕ್ಷೆಯಿದೆ.

ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 15ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಮಳೆಯಾಗಬಹುದು.

ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಹಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ

ಅಕ್ಟೋಬರ್ 15ರಂದು ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಇದೇ ವೇಳೆ ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಮಂಡ್ಯ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಅ.16ರಂದು ಆರು ಜಿಲ್ಲೆಗಳಿಗೆ ಅತಿ ಭಾರಿ ಮಳೆ ಎಚ್ಚರಿಕೆ

ಅಕ್ಟೋಬರ್ 16ರಂದು ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗಬಹುದು.

ಉತ್ತರ ಒಳನಾಡಿನ ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ವಿಜಯಪುರ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆ ಸಾಧಾರಣ ಮಳೆಯಾಗಬಹುದು.

ದುರ್ಬಲಗೊಂಡ ಮುಂಗಾರು

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬುಧವಾರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿತ್ತು. ಈ ಅವಧಿಯಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಮಳೆ ದಾಖಲಾಗಿಲ್ಲ. ಆದರೆ, ಮುಂದಿನ ಎರಡು ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande