ನಾಳೆಯಿಂದ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ
ಅ.19ರವರೆಗೆ ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ; ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ
Karnataka Weather Forecast: Orange Alert for Six Districts as Heavy Rain Continues Till October 19


ಬೆಂಗಳೂರು, 15 ಅಕ್ಟೋಬರ್ (ಹಿ.ಸ.):

ರಾಜ್ಯದಲ್ಲಿ ಈಶಾನ್ಯ ಮಾರುತಗಳ ಪ್ರಭಾವ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಅಕ್ಟೋಬರ್ 16ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಅಕ್ಟೋಬರ್ 19ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ಯಾವ ದಿನ ಯಾವ ಜಿಲ್ಲೆಗಳಲ್ಲಿ ಮಳೆ?

ಅಕ್ಟೋಬರ್ 15ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಬಹುದು.

ಅಕ್ಟೋಬರ್ 16ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಅಕ್ಟೋಬರ್ 17ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

ಅಕ್ಟೋಬರ್ 18ರಂದು ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ವಿಜಯನಗರ, ಬಳ್ಳಾರಿ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಅಕ್ಟೋಬರ್ 19ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ. ಆದರೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು.

ಬೆಂಗಳೂರಿನಲ್ಲಿಯೂ ಮಳೆ ಸಾಧ್ಯತೆ

ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆಯ ಪ್ರಭಾವ ಕಡಿಮೆಯಾಗುತ್ತಿದ್ದು, ಈಶಾನ್ಯ ಮಾರುತಗಳು ದಕ್ಷಿಣ ಭಾರತದಲ್ಲಿ ಪ್ರಭಾವ ಬೀರಲು ಆರಂಭಿಸಿವೆ. ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಯನ್ನು ದಾಟಿ ಒಳನಾಡಿನತ್ತ ಚಲಿಸುವ ನಿರೀಕ್ಷೆಯಿದೆ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ದಿನಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳವರೆಗೆ ಅಲ್ಲಲ್ಲಿ ಮಳೆಯಾಗಬಹುದು.

ತಾಪಮಾನ ಇಳಿಕೆ ನಿರೀಕ್ಷೆ

ಇತ್ತೀಚಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಿತ್ತು. ಕಲಬುರಗಿಯಲ್ಲಿ ಸುಮಾರು 36 ಡಿಗ್ರಿ ಸೆಲ್ಸಿಯಸ್, ಕಾರವಾರದಲ್ಲಿ 39 ಡಿಗ್ರಿ ಸೆಲ್ಸಿಯಸ್, ಹೊನ್ನಾವರದಲ್ಲಿ 37 ಡಿಗ್ರಿ ಸೆಲ್ಸಿಯಸ್ ಮತ್ತು ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಮುಂದಿನ ದಿನಗಳಲ್ಲಿ ಮಳೆಯಾಗುವುದರಿಂದ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ವಾಹನ ಸವಾರರು, ರೈತರಿಗೆ ಎಚ್ಚರಿಕೆ

ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮುಂಜಾನೆ ದಟ್ಟ ಮಂಜು ಕವಿಯುವ ಪ್ರದೇಶಗಳಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕು.

ಮಳೆಯಿಂದ ಬೆಳೆಗಳಿಗೆ ಹಾನಿಯಾಗದಂತೆ ಕಟಾವು ಮಾಡಿದ ಹಾಗೂ ಕಟಾವಿಗೆ ಬಂದಿರುವ ಬೆಳೆಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಸಂಗ್ರಹಿಸಿಡುವಂತೆ ರೈತರಿಗೆ ಸಲಹೆ ನೀಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande