
ಶಿವಮೊಗ್ಗ, 15 ಅಕ್ಟೋಬರ್ (ಹಿ.ಸ.):
ಸಂವಿಧಾನದ ಆಶಯಗಳನ್ನು ಅರ್ಥೈಸಿಕೊಂಡು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸುವುದರ ಜತೆಗೆ ಜನಪ್ರತಿನಿಧಿತ್ವ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವಲ್ಲಿ ಯುವ ಸಂಸತ್ತು ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-2026ರ ಅಂಗವಾಗಿ ತಮ್ಮ ಸ್ವಕ್ಷೇತ್ರ ಶಿಕಾರಿಪುರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಯುವ ಸಂಸತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಿಕಾರಿಪುರದ ಪ್ರತಿಭಾವಂತ ಯುವಕ-ಯುವತಿಯರು ಸಂಸದೀಯ ವ್ಯವಸ್ಥೆ, ಆಡಳಿತ ವಿಧಾನ ಹಾಗೂ ಚರ್ಚೆಗಳಲ್ಲಿ ತೋರಿದ ಉತ್ಸಾಹ ಪ್ರಶಂಸನೀಯವಾಗಿದೆ ಎಂದು ವಿಜಯೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಜಾಪ್ರಭುತ್ವದ ಭವಿಷ್ಯವಾಗಿರುವ ಯುವಶಕ್ತಿ ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಸಶಕ್ತ, ಸಮೃದ್ಧ ಹಾಗೂ ವಿಕಸಿತ ಭಾರತ ನಿರ್ಮಾಣಕ್ಕೆ ಯುವಜನರು ತಮ್ಮ ಕೊಡುಗೆ ನೀಡಬೇಕು ಎಂದು ಅವರು ಆಶಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.