ಮತಾಧಿಕಾರದ ರಕ್ಷಣೆಗೆ ಇಂಡಿಯಾ ಮೈತ್ರಿಕೂಟದ ಸಂಘಟಿತ ಹೋರಾಟ:ಬಿ.ಕೆ.ಹರಿಪ್ರಸಾದ
ಬೆಂಗಳೂರು, 16 ಅಕ್ಟೋಬರ್ (ಹಿ.ಸ.): ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ನಾಗರಿಕರ ಮತದಾನದ ಹಕ್ಕಿನ ರಕ್ಷಣೆಗಾಗಿ ‘ಮತ ಉಳಿಸಿ–ದೇಶ ಉಳಿಸಿ’ ಘೋಷಣೆಯಡಿ ಕರ್ನಾಟಕದಲ್ಲಿ ಸಂಘಟಿತ ಹೋರಾಟ ರೂಪಿಸಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ರದ್ದತಿ, ಕೈಬಿಟ್ಟ
ಇಂಡಿಯಾ ಮೈತ್ರಿಕೂಟದ ರಾಜ್ಯಮಟ್ಟದ ಸಭೆ


ಬೆಂಗಳೂರು, 16 ಅಕ್ಟೋಬರ್ (ಹಿ.ಸ.):

ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ನಾಗರಿಕರ ಮತದಾನದ ಹಕ್ಕಿನ ರಕ್ಷಣೆಗಾಗಿ ‘ಮತ ಉಳಿಸಿ–ದೇಶ ಉಳಿಸಿ’ ಘೋಷಣೆಯಡಿ ಕರ್ನಾಟಕದಲ್ಲಿ ಸಂಘಟಿತ ಹೋರಾಟ ರೂಪಿಸಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ರದ್ದತಿ, ಕೈಬಿಟ್ಟ ಅರ್ಹ ಮತದಾರರ ಹೆಸರುಗಳ ಮರುಸೇರ್ಪಡೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನವೆಂಬರ್ 5ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಶುಕ್ರವಾರ ನಗರದ ಶಾಸಕರ ಭವನದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ರಾಜ್ಯಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹರಿಪ್ರಸಾದ್, ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ನೈಜ ಹಾಗೂ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವುದನ್ನು ಒಪ್ಪಲು ಸಾಧ್ಯವಿಲ್ಲ. ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. ದೇಶಾದ್ಯಂತ ಸುಮಾರು 13 ಕೋಟಿ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, ಅರ್ಹ ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದು ಇಂಡಿಯಾ ಮೈತ್ರಿಕೂಟದ ಸ್ಪಷ್ಟ ನಿಲುವಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗವು ರಾಜಕೀಯ ಪಕ್ಷವೊಂದರ ಪರವಾಗಿ ನಡೆದುಕೊಳ್ಳುತ್ತಿದೆ ಎಂದು ದೂರಿದರು. ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನಗಳ ವಿರುದ್ಧ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪ್ರಜಾಸತ್ತಾತ್ಮಕ ಶಕ್ತಿಗಳು ಒಗ್ಗೂಡಿ ಹೋರಾಡಬೇಕು ಎಂದು ಹೇಳಿದರು.

ರಾಜ್ಯಮಟ್ಟದ ಸಮನ್ವಯ ಸಮಿತಿ ರಚನೆ

ಕರ್ನಾಟಕದಲ್ಲಿ ಹೋರಾಟವನ್ನು ಸಂಘಟಿಸಲು ಕಾಂಗ್ರೆಸ್, ಭಾರತೀಯ ಕಮ್ಯುನಿಸ್ಟ್ ಪಕ್ಷ, ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ), ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ–ಲೆನಿನ್‌ವಾದಿ) ಲಿಬರೇಶನ್, ಸಮಾಜವಾದಿ ಪಕ್ಷ ಹಾಗೂ ಫಾರ್ವರ್ಡ್ ಬ್ಲಾಕ್ ಸೇರಿದಂತೆ ಮಿತ್ರಪಕ್ಷಗಳ ಪ್ರತಿನಿಧಿಗಳನ್ನು ಒಳಗೊಂಡ ಸಮನ್ವಯ ಸಮಿತಿ ರಚಿಸಲು ಸಭೆ ನಿರ್ಧರಿಸಿತು. ಸಮಿತಿಯ ಮೂಲಕ ಬೆಂಗಳೂರಿನಿಂದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದವರೆಗೆ ಹೋರಾಟದ ರೂಪುರೇಷೆ ಸಿದ್ಧಪಡಿಸಿ ಜನಾಂದೋಲನ ರೂಪಿಸಲಾಗುವುದು ಎಂದು ತಿಳಿಸಲಾಯಿತು.

ನವೆಂಬರ್ 1ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಕರ್ನಾಟಕದಿಂದ ಇಂಡಿಯಾ ಮೈತ್ರಿಕೂಟದ ಹೆಚ್ಚಿನ ಸಂಖ್ಯೆಯ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಇದರ ಮುಂದುವರಿದ ಭಾಗವಾಗಿ ನವೆಂಬರ್ 5ರಂದು ಬೆಂಗಳೂರಿನಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಬಳಿಕ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿಯೂ ಹೋರಾಟ ವಿಸ್ತರಿಸಲಾಗುವುದು ಎಂದು ಹರಿಪ್ರಸಾದ್ ತಿಳಿಸಿದರು.

ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಪ್ರಜಾಸತ್ತಾತ್ಮಕ ಹಕ್ಕು. ನಿರ್ಬಂಧಗಳನ್ನು ವಿಧಿಸುವ ಮೂಲಕ ಜನರ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಸಂವಿಧಾನ ಮತ್ತು ಮತಾಧಿಕಾರದ ರಕ್ಷಣೆಗಾಗಿ ನಡೆಯುವ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಇದು ರಾಜಕೀಯ ಪಕ್ಷಗಳಿಗೆ ಸೀಮಿತವಾದ ಹೋರಾಟವಲ್ಲ; ದೇಶದ ಪ್ರಜಾಪ್ರಭುತ್ವ ಮತ್ತು ನಾಗರಿಕರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುವ ಹೋರಾಟವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಮಿತ್ರಪಕ್ಷಗಳ ಮುಖಂಡರು ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು, ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ಪರಿಣಾಮಗಳು ಹಾಗೂ ಮುಂದಿನ ಹೋರಾಟದ ಕಾರ್ಯತಂತ್ರಗಳ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳನ್ನು ಒಗ್ಗೂಡಿಸಿ ಮತಾಧಿಕಾರದ ರಕ್ಷಣೆಯ ಹೋರಾಟವನ್ನು ಜನಾಂದೋಲನವಾಗಿ ರೂಪಿಸುವ ಅಗತ್ಯವನ್ನು ಪ್ರತಿಪಾದಿಸಿದರು.

ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ರಾಜ್ಯ ಕಾರ್ಯದರ್ಶಿ ಕೆ. ಪ್ರಕಾಶ್, ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್, ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಮಂಜಪ್ಪ ಯಾದವ್ ಸೇರಿದಂತೆ ವಿವಿಧ ಮಿತ್ರಪಕ್ಷಗಳ ಮುಖಂಡರು ಹಾಗೂ ಪ್ರತಿನಿಧಿಗಳು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande