
ಗದಗ, 16 ಅಕ್ಟೋಬರ್ (ಹಿ.ಸ.)
ಸ್ಟಿಂಗ್ ಆಪರೇಷನ್ ವಿಚಾರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಪ್ರಸ್ತಾಪಿಸಿರುವುದರಿಂದ, ಪ್ರಕರಣದ ಸತ್ಯಾಸತ್ಯತೆ ಹೊರಬರಲು ಗಂಭೀರ ತನಿಖೆ ನಡೆಸಬೇಕು. ತನಿಖೆ ನಡೆಸದೆ ಸುಮ್ಮನಾದರೆ ಮುಖ್ಯಮಂತ್ರಿಯವರ ಮೇಲೆಯೇ ಸಂಶಯ ಮೂಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ವಿಚಾರವನ್ನು ಮುಖ್ಯಮಂತ್ರಿಯವರೇ ಪ್ರಾರಂಭಿಸಿರುವುದರಿಂದ ಅದನ್ನು ಗಂಭೀರವಾಗಿ ಪರಿಗಣಿಸಿ ಸತ್ಯವನ್ನು ಹೊರತರಬೇಕು. ಕೇವಲ ಹೇಳಿಕೆ ನೀಡಿ ಬಳಿಕ ಸುಮ್ಮನಿರುವುದು ಸರಿಯಲ್ಲ. ಸಂಪುಟದ ಸಹೋದ್ಯೋಗಿಗಳ ಬಗ್ಗೆಯೇ ಇಂತಹ ವಿಚಾರಗಳು ಪ್ರಸ್ತಾಪವಾದಾಗ ಅದರ ಪರಿಣಾಮಗಳನ್ನೂ ಗಂಭೀರವಾಗಿ ಪರಿಗಣಿಸಬೇಕು. ಸಮಗ್ರ ತನಿಖೆ ನಡೆಸದಿದ್ದರೆ ಸಂಶಯಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಹೇಳಿದರು.
ಸುಳ್ಳು ಸುದ್ದಿ ಹರಡುವವರ ವಿರುದ್ಧ ತನಿಖೆಗೆ ಆಗ್ರಹ
ಯೂಟ್ಯೂಬ್ ಹಾಗೂ ಇತರ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿಗಳನ್ನು ಸೃಷ್ಟಿಸಿ ಹರಡುವುದರ ಹಿಂದೆ ದೊಡ್ಡ ಮಟ್ಟದ ಷಡ್ಯಂತ್ರ ಇರುವ ಸಾಧ್ಯತೆಯಿದೆ. ಈ ಬಗ್ಗೆಯೂ ನಿಖರವಾದ ತನಿಖೆ ನಡೆಸುವ ಅಗತ್ಯವಿದೆ ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟರು.
ಮಾಧ್ಯಮಗಳು ಹಾಗೂ ಪತ್ರಕರ್ತರು ವಾಸ್ತವ ಮತ್ತು ಸತ್ಯಾಂಶಗಳನ್ನು ಆಧರಿಸಿ ವರದಿ ಮಾಡಬೇಕು. ಆಧಾರರಹಿತ ಸುದ್ದಿಗಳನ್ನು ಪ್ರಸಾರ ಮಾಡಬಾರದು. ಯಾವುದೇ ಗಂಭೀರ ವಿಚಾರವಿದ್ದರೂ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಅದರ ಮುಖಂಡರು ಅರಾಜಕತೆಯ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ ಬೊಮ್ಮಾಯಿ, ಯಾವುದೇ ಪ್ರಕರಣವನ್ನು ಮೇಲ್ನೋಟದ ತನಿಖೆಗೆ ಸೀಮಿತಗೊಳಿಸದೆ ಸತ್ಯಾಂಶಗಳನ್ನು ಪತ್ತೆಹಚ್ಚಬೇಕು. ತಪ್ಪು ಮಾಡಿದವರಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಮೀಸಲಾತಿ ವಿಚಾರದಲ್ಲಿ ನ್ಯಾಯ ಸಿಗುವ ವಿಶ್ವಾಸ
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿ ಹೆಚ್ಚಳ ರದ್ದಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾನೂನು ತಜ್ಞರ ಸಲಹೆ ಪಡೆದು, ಎಲ್ಲ ಪಕ್ಷಗಳ ವಿಶ್ವಾಸದೊಂದಿಗೆ ಸುಪ್ರೀಂ ಕೋರ್ಟ್ನಲ್ಲಿ ಸಮರ್ಥವಾಗಿ ವಾದ ಮಂಡಿಸಿದರೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.
ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೆಚ್ಚಿನ ಮೀಸಲಾತಿ ಪ್ರಮಾಣ ಜಾರಿಯಲ್ಲಿದೆ. ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಸಂವಿಧಾನ ತಿದ್ದುಪಡಿ ಮಾಡಿದೆ. ಇದರಿಂದ ಮೀಸಲಾತಿ ವಿಚಾರದಲ್ಲಿ ಕಾನೂನುಬದ್ಧವಾಗಿ ವಾದ ಮಂಡಿಸಲು ಅವಕಾಶಗಳಿವೆ ಎಂದು ಹೇಳಿದರು.
ರಾಜ್ಯದಲ್ಲಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ಆಧರಿಸಿ ಮೀಸಲಾತಿ ಹೆಚ್ಚಳ ಮಾಡಲಾಗಿತ್ತು. ಆದರೆ, ರಾಜ್ಯ ಸರ್ಕಾರ ಹೈಕೋರ್ಟ್ನಲ್ಲಿ ಸಮರ್ಪಕವಾಗಿ ವಾದ ಮಂಡಿಸಿಲ್ಲ ಎಂದು ಆರೋಪಿಸಿದರು. ಈ ಎಲ್ಲ ಅಂಶಗಳನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ನಲ್ಲಿ ಸಮರ್ಥವಾಗಿ ವಾದ ಮಂಡಿಸಿದರೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಎಸ್ಐಆರ್ ವಿಚಾರದಲ್ಲಿ ಕಾಂಗ್ರೆಸ್ಗೆ ಟೀಕೆ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿಚಾರವಾಗಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟದ ಕುರಿತು ಮಾತನಾಡಿದ ಬೊಮ್ಮಾಯಿ, ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗ ಹಾಗೂ ಇವಿಎಂಗಳ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಸಂವಿಧಾನಾತ್ಮಕ ಸಂಸ್ಥೆಗಳು ಹಾಗೂ ನ್ಯಾಯಾಲಯಗಳ ತೀರ್ಪುಗಳಿಗೆ ಗೌರವ ನೀಡುವುದು ಅಗತ್ಯ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP