
ಬೆಂಗಳೂರು, 16 ಅಕ್ಟೋಬರ್ (ಹಿ.ಸ.):
ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಸಿಹಿ ತಿಂಡಿಗಳು ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸಿಹಿ ತಯಾರಿಕಾ ಘಟಕಗಳು ಮತ್ತು ಮಾರಾಟ ಮಳಿಗೆಗಳನ್ನು ಆಹಾರ ಸುರಕ್ಷತಾ ಅಧಿಕಾರಿಗಳು ವಿಶೇಷ ತಪಾಸಣೆ ನಡೆಸಿದ್ದಾರೆ. ಶುಕ್ರವಾರ ರಾಜ್ಯದಾದ್ಯಂತ 80 ಸಿಹಿ ತಯಾರಿಕಾ ಘಟಕಗಳು ಹಾಗೂ ಮಳಿಗೆಗಳನ್ನು ಪರಿಶೀಲಿಸಲಾಗಿದ್ದು, 125 ಆಹಾರ ಮಾದರಿಗಳನ್ನು ಪರೀಕ್ಷೆಗಾಗಿ ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತಾ ವಿಭಾಗದ ಅಧಿಕಾರಿಗಳು, ನೈರ್ಮಲ್ಯ ಕಾಪಾಡದಿರುವುದು, ಸಿಬ್ಬಂದಿ ವೈದ್ಯಕೀಯ ಕ್ಷಮತಾ ಪ್ರಮಾಣಪತ್ರ ಹೊಂದಿರದಿರುವುದು ಹಾಗೂ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಮಾನ್ಯ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವುದು ಸೇರಿದಂತೆ ವಿವಿಧ ಲೋಪಗಳ ಹಿನ್ನೆಲೆಯಲ್ಲಿ 10 ಘಟಕಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕೃತಕ ಬಣ್ಣ, ಕಲಬೆರಕೆ ಬಳಕೆಗೆ ಕಡಿವಾಣ
ಸಿಹಿ ತಯಾರಿಕೆಯಲ್ಲಿ ಬಳಸುವ ಕಚ್ಚಾ ವಸ್ತುಗಳ ಗುಣಮಟ್ಟ, ಅಡುಗೆಮನೆಯ ಸ್ವಚ್ಛತೆ, ಕೃತಕ ಬಣ್ಣಗಳ ಬಳಕೆ ಹಾಗೂ ಆಹಾರ ಕಲಬೆರಕೆ ಕುರಿತು ಅಧಿಕಾರಿಗಳು ಕಟ್ಟುನಿಟ್ಟಿನ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ಉಲ್ಲಂಘನೆಗಳು ದೃಢಪಟ್ಟಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಹಬ್ಬದ ಋತುವಿನಾದ್ಯಂತ ತಪಾಸಣೆ ಮುಂದುವರಿಯಲಿದ್ದು, ಸಾರ್ವಜನಿಕರಿಗೆ ಅಸುರಕ್ಷಿತ ಆಹಾರ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ದೂರು ನೀಡಲು ಸಾರ್ವಜನಿಕರಿಗೆ ಮನವಿ
ಅಸ್ವಚ್ಛ ವಾತಾವರಣದಲ್ಲಿ ಆಹಾರ ತಯಾರಿಸುವುದು, ಸಿಹಿ ತಿಂಡಿಗಳಲ್ಲಿ ಕಲಬೆರಕೆ ಮಾಡುವುದು ಅಥವಾ ಅನುಮತಿಸದ ಕೃತಕ ಬಣ್ಣಗಳನ್ನು ಬಳಸುವುದು ಕಂಡುಬಂದಲ್ಲಿ ಸಾರ್ವಜನಿಕರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಹಂಚಿಕೊಂಡಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ದೂರು ಸಲ್ಲಿಸಬಹುದು ಎಂದು ಮನವಿ ಮಾಡಲಾಗಿದೆ.
ಸಾರ್ವಜನಿಕರಿಂದ ಸ್ವೀಕರಿಸುವ ಪ್ರತಿಯೊಂದು ದೂರನ್ನೂ ಪರಿಶೀಲಿಸಲಾಗುವುದು. ಜನರ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R