
ಬೆಂಗಳೂರು, 16 ಅಕ್ಟೋಬರ್ (ಹಿ.ಸ.):
ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ ಆರಂಭವಾಗಿದ್ದು, ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಅಥವಾ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರು ಕೇಂದ್ರ ತಿಳಿಸಿದೆ.
ಅಕ್ಟೋಬರ್ 15ರಂದು ರಾಜ್ಯದಲ್ಲಿ ನೈಋತ್ಯ ಮುಂಗಾರು ಬಹುತೇಕ ಅಂತ್ಯಗೊಂಡಿದ್ದು, ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮುಂಗಾರು ಆರಂಭವಾಗಿದೆ. ಇದರ ಪರಿಣಾಮವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಭಾರಿ ಮಳೆ
ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ, ಉತ್ತರ ಒಳನಾಡಿನಲ್ಲೂ ಮಳೆ
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡಿನ ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ವಿಜಯಪುರ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಬಹುದು. ಈ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಅಕ್ಟೋಬರ್ 17ರಂದು ಬೆಂಗಳೂರಿಗೂ ಮಳೆ ಮುನ್ಸೂಚನೆ
ಅಕ್ಟೋಬರ್ 17ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು.
ದಾವಣಗೆರೆ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R