
ನವದೆಹಲಿ, 17 ಅಕ್ಟೋಬರ್ (ಹಿ.ಸ.):
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರು ಶನಿವಾರ ದೆಹಲಿಯ ಇಂದ್ರಪ್ರಸ್ಥ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ, ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಆಡ್ವಾಣಿ ಅವರ ಆರೋಗ್ಯ ವಿಚಾರಿಸಿದರು. ಬಳಿಕ ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಭೇಟಿಯಾಗಿ ಅವರ ಆರೋಗ್ಯದ ಸ್ಥಿತಿಗತಿಯ ಕುರಿತು ಮಾಹಿತಿ ಪಡೆದರು.
ಆಡ್ವಾಣಿ ಅವರನ್ನು ನಡ್ಡಾ ಭೇಟಿ ಮಾಡಿದ ವಿಷಯವನ್ನು ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ದೃಢಪಡಿಸಿದ್ದಾರೆ. ಆಡ್ವಾಣಿ ಅವರ ಆರೋಗ್ಯದ ಕುರಿತು ವೈದ್ಯರೊಂದಿಗೆ ಚರ್ಚಿಸಿದ ನಡ್ಡಾ, ಚಿಕಿತ್ಸೆಯ ವಿವರಗಳನ್ನು ಪಡೆದುಕೊಂಡರು.
ಎದೆ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದ 98 ವರ್ಷದ ಆಡ್ವಾಣಿ ಅವರನ್ನು ಶುಕ್ರವಾರ ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ನರರೋಗ ವಿಭಾಗದ ಹಿರಿಯ ಸಲಹೆಗಾರ ಡಾ. ವಿನೀತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆ ಬಿಡುಗಡೆ ಮಾಡಿರುವ ಆರೋಗ್ಯ ವರದಿಯ ಪ್ರಕಾರ, ಆಡ್ವಾಣಿ ಅವರ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ. ವೈದ್ಯರ ತಂಡ ನಿರಂತರವಾಗಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ. ಶುಕ್ರವಾರ ಸಂಜೆ ಸುಮಾರು 7.30ಕ್ಕೆ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿತ್ತು.
ಇದಕ್ಕೂ ಮೊದಲು, ಅಕ್ಟೋಬರ್ 7ರಂದು ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿರುವ ಆಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಸಾರ್ವಜನಿಕ ಜೀವನದಲ್ಲಿ 25 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಆಡ್ವಾಣಿ ಅವರ ಆಶೀರ್ವಾದ ಪಡೆದಿದ್ದರು.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.