
ಕೋಲಾರ, 17 ಅಕ್ಟೋಬರ್ (ಹಿ.ಸ) : ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್) ಆರ್ಥಿಕ ಸ್ಥಿತಿ ಸುಧಾರಿಸಿ, ಪುನಶ್ಚೇತನಗೊಳಿಸಲು ಅಪೆಕ್ಸ್ ಬ್ಯಾಂಕ್ ಹಾಗೂ ರಾಜ್ಯ ಸರ್ಕಾರದ ಸಹಕಾರದೊಂದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್. ರವಿ ತಿಳಿಸಿದರು.
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕಿಗೆ ಭೇಟಿ ನೀಡಿ, ಬ್ಯಾಂಕಿನ ನೂತನ ಅಧ್ಯಕ್ಷ ಹಾಗೂ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಆಡಳಿತ ಮಂಡಳಿಯೊ0ದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿದೆ ಮಾತನಾಡಿದ ಅವರು ಡಿಸಿಸಿ ಬ್ಯಾಂಕ್ ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳು, ಆರ್ಥಿಕ ಸ್ಥಿತಿಗತಿ ಹಾಗೂ ಬ್ಯಾಂಕಿನ ಪುನಶ್ಚೇತನಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಗಿದೆ. ರೈತರು ಮತ್ತು ಸಹಕಾರ ಕ್ಷೇತ್ರದ ಹಿತ ಕಾಯುವ ಉದ್ದೇಶದಿಂದ ಸ್ಥಾಪನೆಯಾಗಿರುವ ಈ ಬ್ಯಾಂಕನ್ನು ಉಳಿಸಿ ಬೆಳೆಸಲು ಎಲ್ಲರೂ ಸಹಕರಿಸಬೇಕು ಎಂದರು.
ಕೇAದ್ರ ಅಥವಾ ರಾಜ್ಯ ಸರ್ಕಾರದ ಮುಂದೆ ಪ್ರಸ್ತುತ ಸಾಲ ಮನ್ನಾ ಮಾಡುವ ಯಾವುದೇ ಸ್ಪಷ್ಟ ಪ್ರಸ್ತಾವನೆ ಇಲ್ಲ. ರೈತರಿಗೆ ಸಬ್ಸಿಡಿ ಹಾಗೂ ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ ನೀಡುವ ವ್ಯವಸ್ಥೆಯಿದ್ದು, ಸಾಲ ಮನ್ನಾ ಕುರಿತು ಯಾವುದೇ ಯೋಜನೆ ಘೋಷಣೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಡಿಸಿಸಿ ಬ್ಯಾಂಕಿನ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಸಾಲ ವಸೂಲಾತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಬಾಕಿ ಸಾಲಗಳನ್ನು ವಸೂಲಿ ಮಾಡುವಾಗ ಯಾರಿಗೂ ಮುಲಾಜು ತೋರಿಸುವುದಿಲ್ಲ. ಬ್ಯಾಂಕಿನಲ್ಲಿ ಅಕ್ರಮ ಎಸಗಿರುವವರು ಹಾಗೂ ತಪ್ಪಿತಸ್ಥರ ವಿರುದ್ಧ ಪರಿಶೀಲನೆ ನಡೆಸಿ, ಕಾನೂನುಬದ್ಧವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಅಪೆಕ್ಸ್ ಬ್ಯಾಂಕ್ ಮತ್ತು ರಾಜ್ಯ ಸರ್ಕಾರದ ನೆರವಿನೊಂದಿಗೆ ಡಿಸಿಸಿ ಬ್ಯಾಂಕನ್ನು ಮತ್ತೆ ಸದೃಢಗೊಳಿಸಿ, ರೈತರಿಗೆ ಅಗತ್ಯ ಸಾಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಬೆಂಬಲಕ್ಕೆ ನಿಲ್ಲಲಾಗುವುದು. ಬ್ಯಾಂಕಿನ ಮೇಲಿನ ವಿಶ್ವಾಸವನ್ನು ಮರುಸ್ಥಾಪಿಸಿ, ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಹಾಗೂ ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಾಪುರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೊತ್ತೂರು ಮಂಜುನಾಥ್, ಉಪಾಧ್ಯಕ್ಷ ಮೋಹನ್ ರೆಡ್ಡಿ, ನಿರ್ದೇಶಕರಾದ ಖಾಜಿಕಲ್ಲಹಳ್ಳಿ ಮುನಿರಾಜು ಸೇರಿದಂತೆ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಅಧಿಕಾರಿಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್