
ಹಾಸನ, 17 ಅಕ್ಟೋಬರ್ (ಹಿ.ಸ.):
ಯಗಚಿ ನದಿಯಿಂದ ಕಾಚಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಸಂಬಂಧ ಎದುರಾಗಿರುವ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು. ಗ್ರಾಮಗಳಿಗೆ ಆದ್ಯತೆಯ ಮೇರೆಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಭರವಸೆ ನೀಡಿದರು.
ಕಾಚಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ನಾಲ್ಕು ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಭೂಮಿಪೂಜೆ ನೆರವೇರಿಸಿದ ಸಚಿವರು, ಬಳಿಕ ನಡೆದ ಪ್ರಜಾ ಸೇವಾ ಜನಾಂದೋಲನ ಸಭೆಯಲ್ಲಿ ಸ್ಥಳೀಯರ ಕುಂದುಕೊರತೆಗಳನ್ನು ಆಲಿಸಿದರು. ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಪ್ರಯತ್ನಿಸಿದರು. ಇದೇ ವೇಳೆ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿದರು.
ಹೇಮಾವತಿ ನದಿಯಿಂದ ಕುಡಿಯುವ ನೀರು ಪೂರೈಸಲಾಗುತ್ತಿದೆಯಾದರೂ, ಅದು 68 ಹಳ್ಳಿಗಳಿಗೆ ಸಾಕಾಗುತ್ತಿಲ್ಲ. ಹೀಗಾಗಿ ಯಗಚಿ ನದಿಯಿಂದ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ಸಮಸ್ಯೆಯನ್ನು ಆದ್ಯತೆಯ ಮೇರೆಗೆ ತ್ವರಿತವಾಗಿ ಪರಿಹರಿಸಲಾಗುವುದು ಎಂದು ತಿಳಿಸಿದರು.
ಬಾಣಾವರ ಹೋಬಳಿಯ ಕೆರೆಗಳನ್ನು ತುಂಬಿಸಲು ಭದ್ರ ಮೇಲ್ದಂಡೆ ಯೋಜನೆಯಿಂದ ನೀರು ಹರಿಸಲಾಗುವುದು. ಅರ್ಕೆರೆ ಕೆರೆಗೆ ನೀರು ತುಂಬಿಸುವುದರಿಂದ ಕ್ಷೇತ್ರದ ಸ್ಥಳೀಯರಿಗೆ ಹೆಚ್ಚಿನ ಅನುಕೂಲವಾಗಲಿದೆ. ಹೀಗಾಗಿ ಅರ್ಕೆರೆ ಕೆರೆ ತುಂಬಿಸುವ ಕಾರ್ಯಕ್ಕೂ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಜನರು ತೃಪ್ತರಾಗಿದ್ದಾರೆ. ಮಹಿಳೆಯರು ಸ್ವಾವಲಂಬಿಗಳಾಗುತ್ತಿದ್ದಾರೆ. ಸರ್ಕಾರ ಒದಗಿಸುತ್ತಿರುವ ಸೌಲಭ್ಯಗಳಿಂದ ಎಲ್ಲ ವರ್ಗದ ಜನರು ಸಂತೋಷದಿಂದಿದ್ದಾರೆ. ಗ್ರಾಮಗಳಲ್ಲಿ ಸಿಮೆಂಟ್ ರಸ್ತೆಗಳ ನಿರ್ಮಾಣವಾಗುತ್ತಿದ್ದು, ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತಿದೆ ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.