
ಬೆಂಗಳೂರು, 17 ಅಕ್ಟೋಬರ್ (ಹಿ.ಸ.):
ಮಾಧ್ಯಮ ಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಸದಸ್ಯರೆಂದು ಹೇಳಿಕೊಂಡು ಸಲೂನ್ಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ನಾಲ್ವರು ಮಹಿಳೆಯರು ಸೇರಿದಂತೆ ಆರು ಮಂದಿಯನ್ನು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಸ್ಥಳೀಯ ಸಲೂನ್ಗೆ ನುಗ್ಗಿ ಸಿಬ್ಬಂದಿಯನ್ನು ಬೆದರಿಸಿ ಹಲ್ಲೆ ನಡೆಸಿ ಹಣ ವಸೂಲಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ ₹80 ಸಾವಿರ ನಗದು, ಏಳು ಮೊಬೈಲ್ ಫೋನ್ಗಳು, ಕೃತ್ಯಕ್ಕೆ ಬಳಸಿದ ಕಾರು ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಮಾಧ್ಯಮ ಮತ್ತು ಸಂಘಟನೆಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿಗಳು ಇದೇ ರೀತಿಯ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆಗೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಮಾಧ್ಯಮದ ಹೆಸರಿನಲ್ಲಿ ಅಕ್ರಮ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R