
ನವದೆಹಲಿ, 18 ಅಕ್ಟೋಬರ್ (ಹಿ.ಸ.):
ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ತಿಳಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಗ್ವಾಲಿಯರ್ನಲ್ಲಿ ಸಂಭವಿಸಿದ ಅಪಘಾತದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ಘಟನೆಯಲ್ಲಿ ಹಲವರು ಮೃತಪಟ್ಟಿರುವ ಸುದ್ದಿ ಹೃದಯವಿದ್ರಾವಕವಾಗಿದೆ ಎಂದು ತಿಳಿಸಿದ್ದಾರೆ. ದುಃಖತಪ್ತ ಕುಟುಂಬಗಳಿಗೆ ಆಳವಾದ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಅಪಘಾತದಲ್ಲಿ ಸಂಭವಿಸಿದ ಸಾವುಗಳಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
13 ಮಂದಿ ಸಾವು, 29 ಜನರಿಗೆ ಗಾಯ
ಮಧ್ಯಪ್ರದೇಶದ ಗ್ವಾಲಿಯರ್ನ ಶೀತಲಾ ಮಾತಾ ದೇವಸ್ಥಾನದ ಬಳಿ ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ಈ ದುರ್ಘಟನೆ ಸಂಭವಿಸಿದೆ. ಸಪ್ತಮಿ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ಆಗಮಿಸಿದ್ದ ಭಕ್ತರ ಮೇಲೆ ವೇಗವಾಗಿ ಬಂದ ಟ್ರಕ್ ಹರಿದಿದೆ.
ಚಿನೌರ್ ರಸ್ತೆಯ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿದ ಟ್ರಕ್, ಪೊಲೀಸರ ತಡೆಗೋಡೆಗಳನ್ನು ಮುರಿದು ಭಕ್ತರು, ಅಂಗಡಿಗಳು ಹಾಗೂ ದೇವಸ್ಥಾನದ ಪ್ರವೇಶದ್ವಾರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗೋಡೆ ಕುಸಿದಿದ್ದು, ಹಲವರು ಅವಶೇಷಗಳಡಿ ಸಿಲುಕಿದ್ದಾರೆ.
ಅಪಘಾತದಲ್ಲಿ 13 ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, 29 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಮಹಿಳೆಯರು, ಮಕ್ಕಳು ಹಾಗೂ ವೃದ್ಧರೂ ಸೇರಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.